ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈಗಿರುವ ರಾಷ್ಟ್ರೀಯ ಪಿಂಚಣಿ ಯೋಜನೆರದ್ದುಪಡಿಸಿ ಈ ಹಿಂದೆ ಇದ್ದ ನಿಶ್ಚಿತ ಪಿಂಚಣಿ ಯೋಜನೆ ಜಾರಿಗೆ ತರಲಾಗುವುದು ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್.ನೌಕರರ ಸಂಘದವರು ಓಟ್ ಫಾರ್ ಓ.ಪಿ.ಎಸ್. ಅಭಿಯಾನದಡಿ ಶುಕ್ರವಾರ ಸಂಜೆ ಶಾಸಕರ ಮನೆಗೆ ಆಗಮಿಸಿದಾಗ ಮನವಿ ಸ್ವೀಕರಿಸಿ ಅವರು ಮಾತನಾಡಿದ ಅವರು, 2006ರ ಏ. 1 ರಿಂದ ಸರ್ಕಾರಿ ನೌಕರರಿಗೆ ಸೇರಿರುವವರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ ಜಾರಿಗೆ ತರಲಾಗಿದೆ. ಅವೈಜ್ಞಾನಿಕ ಯೋಜನೆ ಆಗಿದೆ.ಓಪಿಎಸ್‌ನಿಂದ ನೌಕರರು ತಮ್ಮ ನಿವೃತ್ತಿ ಜೀವನವನ್ನೇ ಕಳೆದುಕೊಂಡಂತಾಗಲಿದೆ. ಸರ್ಕಾರಿ ನೌಕರ ವಿರೋಧಿ ಯೋಜನೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಬೆಳಗಾವಿಯಲ್ಲಿ ನಡೆಯಲಿರುವ ಮುಂದಿನ ಚಳಿಗಾಲ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದುಪಡಿಸಿ ಈ ಹಿಂದೆ ಇದ್ದ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೆ ತರುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು. ಈ ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ದ ಆಗ ಇದ್ದ ನಿಶ್ಚಿತ ಪಿಂಚಣಿ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಈಗಾಗಲೇ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜಸ್ತಾನ, ಛತ್ತೀಸ್‌ಘಡ ರಾಜ್ಯಗಳಲ್ಲಿ ಹಳೇ ಪಿಂಚಣಿ ಯೋಜನೆ ಮರು ಜಾರಿಗೊಳಿಸಲಾಗಿದೆ. ಹಿಮಾಚಲಪ್ರದೇಶದಲ್ಲಿ ನಡೆದ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ಭರವಸೆಯಂತೆ ಪುನಃ ಹಳೇ ಪಿಂಚಣಿ ಯೋಜನೆ ಮರು ಜಾರಿಗೊಳಿಸಲಾಗುವುದು. ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಈ ಹಿಂದೆ ಇದ್ದ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೆ ತರುವುದರಿಂದ ೫ ಲಕ್ಷ ನೌಕರರಿಗೆ ಅನುಕೂಲವಾಗಲಿದೆ. ನೌಕರರು ನಿವೃತ್ತ ಜೀವನವನ್ನು ಉತ್ತಮವಾಗಿ ಕಳೆಯಲು ಕಾಂಗ್ರೆಸ್ ಸದಾ ಬದ್ದವಾಗಿರಲಿದೆ ಎಂದು ಭರವಸೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್‍ಯದರ್ಶಿ ದಿನೇಶ್ ಕೆ.ಶೆಟ್ಟಿ, ಸಂಘದ ತಾಲೂಕು ಅಧ್ಯಕ್ಷ ಜಿ.ಎನ್.ಮಂಜಪ್ಪ, ಎಚ್.ಜಿ.ಎಂ. ಬಸವರಾಜ್, ಪಿ.ಎಂ.ನಾಗರಾಜ್, ಶಿವಕುಮಾರ್, ಪುನೀತ್ ಶಂಕರ್, ಎಸ್. ಗುರುಮೂರ್ತಿ, ಎಚ್.ಎಂ.ತ್ರೀವೇಣಿ, ತಿಪ್ಪಣ್ಣ, ಸಿದ್ದಲಿಂಗಸ್ವಾಮಿ, ಬಿ.ಆರ್. ತಿಪ್ಪೇಸ್ವಾಮಿ ಇತರರು ಇದ್ದರು.