Advertisement

ಪ್ರವಾಹ; ಮುಂಜಾಗ್ರತ ಕ್ರಮಕ್ಕೆ ಡಿಸಿಎಂ ಸೂಚನೆ

04:26 PM Jun 25, 2021 | Team Udayavani |

ಬಾಗಲಕೋಟೆ: ಜಿಲ್ಲೆಯಲ್ಲಿ ಪ್ರವಾಹ ಸಂಭವಿಸಿದಲ್ಲಿ ನಿಯಂತ್ರಣಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಪ್ರವಾಹ ನಿಯಂತ್ರಣ ಹಾಗೂ ಕೋವಿಡ್‌ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರವಾಹ ಉಂಟಾದ ಸಂದರ್ಭದಲ್ಲಿ ಸಂಬಂಧಿಸಿದ ನೋಡಲ್‌ ಅಧಿಕಾರಿಗಳು ಚುರುಕಾಗಿ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ 188 ಗ್ರಾಮಗಳು ಪ್ರವಾಹದಿಂದ ಬಾಧಿತಗೊಳ್ಳುತ್ತಿದ್ದು, ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕಾರ್ಯದ ಜೊತೆಗೆ ಕಾಳಜಿ ಕೇಂದ್ರದ ಮೂಲಕ ಊಟ ಮತ್ತು ಉಪಚಾರದ ವ್ಯವಸ್ಥೆಗೆ ಸಿದ್ಧತೆ ಮಾಡಬೇಕು ಎಂದು ಸೂಚಿಸಿದರು.

ಜಾನುವಾರುಗಳನ್ನು ಸಹ ಸುರಕ್ಷಿತ ಸ್ಥಳಕ್ಕೆ ಸೇರಿಸುವ ಕೆಲಸ ಹಾಗೂ ಮೇವು ಸಂಗ್ರಹಿಸಿ ಇಟ್ಟುಕೊಳ್ಳಬೇಕು. ಹೆಸ್ಕಾಂದವರು ಟಿಸಿ, ಕಂಡಕ್ಟರ್‌ ಸೇರಿದಂತೆ ಇತರೆ ಸಲಕರಣಗಳನ್ನು ಸಂಗ್ರಹಿಸಿ ಇಟ್ಟುಕೊಂಡು ಪ್ರವಾಹ ಸಂದರ್ಭದಲ್ಲಿ ರೈತರಿಗೆ, ಜನವಸತಿಗಳಿಗೆ ವಿದ್ಯುತ್‌ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಲು ತಿಳಿಸಿದರು. ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಪ್ರವಾಹ ಮತ್ತು ಕೋವಿಡ್‌ ನಿಯಂತ್ರಣ ಹಿನ್ನೆ‌ಲೆಯ ಅಧಿಕಾರಿಗಳು ದಿನ 24 ಗಂಟೆಗಳ ಕಾಲ ಕೆಲಸ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಕೋವಿಡ್‌ ಲಸಿಕೆ ಕಾರ್ಯ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು. ವಿಶೇಷ ಅಭಿಯಾನದ ಮೂಲಕ ಎಲ್ಲರಿಗೂ ಲಸಿಕೆ ನೀಡುವ ಕಾರ್ಯವಾಗಬೇಕು. ಈಗಾಗಲೇ ಲಸಿಕೆ ವಿತರಿಸದ ಬಗ್ಗೆ ಮಾಹಿತಿ ಪಡೆದ ಉಪಮುಖ್ಯಮಂತ್ರಿಗಳು ಜಿಲ್ಲೆಗೆ ಬೇಕಾದ ಅಗತ್ಯ ಲಸಿಕೆ ಅಭಾವವಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ 12490 ಕೋವಿಶಿಲ್ಡ್‌ ಮತ್ತು 10820 ಕೋವಾಕ್ಸಿನ್‌ ಸೇರಿ ಒಟ್ಟು 23310 ಡೋಸ್‌ ವಾಕ್ಸಿನ್‌ ಇರುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಎ.ಎನ್‌ .ದೇಸಾಯಿ ತಿಳಿಸಿದರು. ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ಕೆ.ರಾಜೇಂದ್ರ ಮಾತನಾಡಿ, ಪ್ರವಾಹ ಪೀಡಿತ ಗ್ರಾಮಗಳಿಗೆ ನೋಡಲ್‌ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರತಿ ತಾಲೂಕು ಹಾಗೂ ಉಪವಿಭಾಗ ಮಟ್ಟದಲ್ಲಿ ಮತ್ತು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ದಿನ 24 ಗಂಟೆಗಳ ತುರ್ತು ಸಹಾಯವಾಣಿ ಪ್ರಾರಂಭಿಸಲಾಗಿದೆ. ಕಾಳಜಿ ಕೇಂದ್ರ ಗುರುತಿಸಲಾಗಿದೆ.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚರಂಡಿ, ನಾಲಾಗಳನ್ನು ಸ್ವತ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಲಾಗುತ್ತಿದೆ. ನುರಿತ ಈಜುಗಾರರು, ಹಾವು ಹಿಡಿಯುವವರು ಹಾಗೂ ಸ್ವಯಂ ಸೇವಕರನ್ನು ಗುರುತಿಸಿಡಲಾಗಿದೆ ಎಂದು ಹೇಳಿದರು. ಶಾಸಕ ವೀರಣ್ಣ ಚರಂತಿಮಠ, ವಿಧಾನಪರಿಷತ್‌ ಸದಸ್ಯ ಹನಮಂತ ನಿರಾಣಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿಪಂ ಸಿಇಒ ಟಿ.ಭೂಬಾಲನ್‌, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ|ವಿಜಯ ಕಂಠಿ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ತೋಟಗಾರಿಕೆ ಉಪನಿರ್ದೇಶಕ ರಾಹುಲ್‌ಕುಮಾರ ಬಾವಿದಡ್ಡಿ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next