ಬೆಳಗಾವಿ: ಬೆಳಗಾವಿ ಜಿಲ್ಲೆ ಸೇರಿದಂತೆ ಇಡೀ ರಾಜ್ಯವೇ ಭೀಕರ ಪ್ರವಾಹದ ಹೊಡೆತಕ್ಕೆ ಸಿಲುಕಿದ್ದು, ಲಕ್ಷಾಂತರ ಕುಟುಂಬಗಳು ಪುನರ್ವಸತಿಯ ನಿರೀಕ್ಷೆಯಲ್ಲಿವೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಪ್ರವಾಹಕ್ಕೆ ಸಿಲುಕಿದವರ ರಕ್ಷಣೆ, ಆಶ್ರಯ, ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳನ್ನು ತಕ್ಷಣವೇ ಆರಂಭಿಸುವ ಮೂಲಕ ಭಾರೀ ಪ್ರಮಾಣದ ಸಾವು-ನೋವು ಹಾಗೂ ಆಸ್ತಿಪಾಸ್ತಿ ನಷ್ಟ ತಡೆಗಟ್ಟಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಸ್. ಬೊಮ್ಮನಹಳ್ಳಿ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹರಿಯುತ್ತಿರುವ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಮಾರ್ಕಂಡೇಯ, ಹಿರಣ್ಯಕೇಶಿ, ದೂಧಗಂಗಾ ಮತ್ತು ವೇದಗಂಗಾ ನದಿಗಳ ಮಹಾಪೂರದಿಂದಾಗಿ ಲಕ್ಷಾಂತರ ಕುಟುಂಬಗಳು ಮನೆಮಠಗಳನ್ನು ತೊರೆಯಬೇಕಾಯಿತು. ಈ
ಸಂದರ್ಭದಲ್ಲಿ ಜಿಲ್ಲಾಡಳಿತ ಪ್ರವಾಹದಿಂದ ತತ್ತರಿಸಿದ್ದ ಜಿಲ್ಲೆಯ 14 ತಾಲೂಕುಗಳ 374 ಗ್ರಾಮಗಳ 4.14 ಲಕ್ಷ ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿದೆ ಎಂದರು.
ಸಂತ್ರಸ್ತರಿಗಾಗಿ ಪ್ರವಾಹ ಬಾಧಿತ ಬೆಳಗಾವಿ ನಗರವೂ ಸೇರಿದಂತೆ ಒಟ್ಟು 493 ಪರಿಹಾರ ಕೇಂದ್ರಗಳನ್ನು ಆರಂಭಿಸುವ ಮೂಲಕ 1,84,966 ಜನರಿಗೆ ಊಟೋಪಹಾರ, ಹಾಸಿಗೆ-ಹೊದಿಕೆಗಳು, ಶುದ್ಧ ಕುಡಿಯುವ ನೀರು, ವೈದ್ಯಕೀಯ ಸೌಲಭ್ಯ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಪ್ರಾಥಮಿಕ ಸಮೀಕ್ಷೆಯ ಪ್ರಕಾರ ಪ್ರವಾಹದಿಂದಾಗಿ 10,202 ಮನೆಗಳು ಭಾಗಶಃ ಹಾಗೂ 6,801 ಮನೆಗಳು ಸಂಪೂರ್ಣವಾಗಿ ಕುಸಿದಿವೆ. 2665 ಕಿ.ಮೀ ರಸ್ತೆ, 512 ಸೇತುವೆಗಳು, 3255 ಸರ್ಕಾರಿ ಕಟ್ಟಡಗಳು, 286 ನೀರು ಸರಬರಾಜು ಪೈಪ್‌ಲೈನ್ ಹಾಗೂ 5204 ವಿದ್ಯುತ್ ಕಂಬಗಳು ಹಾನಿಗೊಳಗಾಗಿವೆ ಎಂದರು. ಪ್ರಕೃತಿ ವಿಕೋಪದ ತುರ್ತು ಸಂದರ್ಭದಲ್ಲಿ ನಮ್ಮ ನೆರವಿಗೆ ಧಾವಿಸಿದ ಭಾರತೀಯ ಸೇನೆಯ ಯೋಧರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಪೊಲೀಸ್, ಗೃಹರಕ್ಷಕ ದಳ ಸಿಬ್ಬಂದಿ ತಮ್ಮ ಪ್ರಾಣ ಪಣಕ್ಕಿಟ್ಟು ಪ್ರವಾಹದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ವಾಯುಸೇನೆ ಹಾಗೂ ನೌಕಾಸೇನೆಯ ಒಟ್ಟು ಐದು ಹೆಲಿಕಾಪ್ಟರ್‌ಗಳನ್ನು ಬಳಕೆ ಮಾಡಲಾಗಿದೆ ಎಂದರು. ಪ್ರಸ್ತುತ ಪೂರ್ವ ಮುಂಗಾರಿನಲ್ಲಿ ಶೇ. 71ರಷ್ಟು ಮಳೆ ಕೊರತೆ ಉಂಟಾಗಿರುವುದರಿಂದ ಜಿಲ್ಲೆಯಲ್ಲಿ ಮುಂಗಾರು ಬಿತ್ತನೆ ಪ್ರಾರಂಭವಾಗಲು ಸ್ವಲ್ಪ ಹಿನ್ನಡೆಯಾಗಿತ್ತು. ಆದರೆ ಆಗಸ್ಟ್ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಶೇ.490 ರಷ್ಟು ಹೆಚ್ಚು ಮಳೆಯಾಗಿದೆ. ಅಣೆಕಟ್ಟೆಗಳಿಂದ ನಿರಂತರವಾಗಿ ಬಿಡುಗಡೆಯಾಗುತ್ತಿರುವ ಹೆಚ್ಚಿನ ಪ್ರಮಾಣದ ನೀರಿನಿಂದ ನದಿ ದಡದಲ್ಲಿರುವ ಗ್ರಾಮಗಳಲ್ಲಿ ಪ್ರವಾಹ ಉಂಟಾಗಿ ಒಟ್ಟು ಬಿತ್ತನೆಯಾದ 6.09 ಲಕ್ಷ ಹೆಕ್ಟೇರ್ ಕ್ಷೇತ್ರದ ಪೈಕಿ ಸುಮಾರು 2.35 ಲಕ್ಷ ಹೆಕ್ಟೇರ್‌ಗಿಂತ ಹೆಚ್ಚು ಪ್ರದೇಶದಲ್ಲಿ ಮುಂಗಾರು ಬೆಳೆಗಳು ಜಲಾವೃತಗೊಂಡಿವೆ ಎಂದರು.
ಜಿಲ್ಲೆಯಲ್ಲಿ ಒಟ್ಟು 2,341 ಕೋಟಿ ರೂಪಾಯಿ ಬೆಳೆ ಹಾನಿಯಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ನೀರು ಇಳಿದ ನಂತರ ಜಂಟಿ ಸಮೀಕ್ಷೆ ಕೈಗೊಂಡ ಮೇಲೆ ನಿಖರವಾದ ಬಾಧಿತ ಕ್ಷೇತ್ರವನ್ನು ಹಾಗೂ ಹಾನಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.
ಡಿಸಿಸಿ ಬ್ಯಾಂಕುಗಳು ಹಾಗೂ ಪಿಕಾರ್ಡ ಬ್ಯಾಂಕುಗಳಿಂದ ಅಲ್ಪಾವಧಿ ಸಾಲ ಪಡೆದು 2918 ರ ಜುಲೈ 10 ಕ್ಕೆ ಹೊಂದಿರುವ ಹೊರಬಾಕಿಯಲ್ಲಿ ಒಂದು ಕುಟುಂಬಕ್ಕೆ ಗರಿಷ್ಟ 1 ಲಕ್ಷ ರೂವರೆಗಿನ ಸಾಲ ಮನ್ನಾ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಯೋಜನೆಯಲ್ಲಿ ಜಿಲ್ಲೆಯ ಒಟ್ಟು 2 ಲಕ್ಷ 88 ಸಾವಿರ ರೈತರ ಸಾಲ 1293 ಕೋಟಿ ರೂ. ಮನ್ನಾ ಆಗುವ ಬಗ್ಗೆ ಅಂದಾಜಿಸಲಾಗಿದ್ದು ಇದುವೆರೆಗೆ 89810 ರೈತರ ಖಾತೆಗೆ 310 ಕೋಟಿ ಅನುದಾನ ಜಮಾ ಮಾಡಲಾಗಿದೆ ಎಂದು ಹೇಳಿದರು.