ಹುಬ್ಬಳ್ಳಿ: ರಾಜ್ಯಮಟ್ಟದ ಜಾನಪದ ಜಾತ್ರೆ ಜ. 10ರಂದು ಇಲ್ಲಿನ ಸಿದ್ಧಾರೂಢ ಮಠದಲ್ಲಿ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ ಚಲವಾದಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಸಂಜೆ 4 ಗಂಟೆಗೆ ಸಿದ್ಧಾರೂಢ ಮಠದ ಮುಖ್ಯದ್ವಾರದಿಂದ ಮಠದ ಮುಂಭಾಗದಲ್ಲಿ ನಿರ್ಮಿಸುವ ವೇದಿಕೆ ವರೆಗೆ ಮೆರವಣಿಗೆ ನಡೆಯಲಿದೆ. ಸಂಜೆ 5 ಗಂಟೆಗೆ ವೇದಿಕೆ ಕಾರ್ಯಕ್ರಮದ ಮೂಲಕ ಜಾನಪದ ಜಾತ್ರೆ ಉದ್ಘಾಟನೆಗೊಳ್ಳಲಿದೆ ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು. ಮಠದ ಆಡಳಿತಾಧಿಕಾರಿ ಹಾಗೂ ನ್ಯಾಯಾಧೀಶರಾದ ಈಶಪ್ಪ ಭೂತೆ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ, ಶಾಸಕರಾದ ಪ್ರಸಾದ ಅಬ್ಬಯ್ಯ, ಅಮೃತ ದೇಸಾಯಿ, ಶಂಕರ ಪಾಟೀಲ ಮುನೇನಕೊಪ್ಪ, ಕುಸುಮಾವತಿ ಶಿವಳ್ಳಿ, ಸಿ.ಎಂ. ನಿಂಬಣ್ಣವರ, ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಪ್ರದೀಪ ಶೆಟ್ಟರ, ಪ್ರೊ| ಎಸ್.ವಿ. ಸಂಕನೂರ ಮೊದಲಾದವರು ಪಾಲ್ಗೊಳ್ಳುವರು ಎಂದರು.
ಜಾನಪದ ಕಲೆ ಹಾಗೂ ಕಲಾವಿದರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಾನಪದ ಜಾತ್ರೆ ಹಮ್ಮಿಕೊಳ್ಳಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಯಿಂದ ಸುಮಾರು 35 ಕಲಾತಂಡಗಳು ಪಾಲ್ಗೊಳ್ಳುತ್ತಿದ್ದು, ಪ್ರಾದೇಶಿಕ ಕಲಾತಂಡಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದೆ. ಧಾರವಾಡ ಜಿಲ್ಲೆಯಲ್ಲಿ 7 ತಂಡಗಳು ಪ್ರತಿನಿಧಿಸುತ್ತಿವೆ. ಡೊಳ್ಳು, ಜಗ್ಗಲಿಗೆ, ಕಂಸಾಳೆ, ಕರಡಿ ಮಜಲು, ತಮಟೆ, ನಗಾರಿ, ಚಂಡೆವಾದನ, ಕೀಲು ಕುದುರೆ, ಚೌಡಿಕೆ ಪದ, ತತ್ವ ಪದ, ಜಾನಪದ ಹಾಡುಗಳು, ಕೋಲಾಟ, ಪಟಕುಣಿತ, ಸೋಮನ ಕುಣಿತ, ಕೊರಗ ಕುಣಿತ, ಡಮಾಮಿ ನೃತ್ಯ, ಜೇನು ಕುರುಬ ನೃತ್ಯ ಸೇರಿದಂತೆ ವಿವಿಧ ಕಲಾ ತಂಡಗಳು ಪಾಲ್ಗೊಳ್ಳಲಿವೆ ಎಂದು ವಿವರಿಸಿದರು.
ಜ. 8 ಹಾಗೂ 9ರಂದು ಕಲಾವಿದರಿಗೆ ಕಾರ್ಯಕ್ರಮದ ಕುರಿತು ಎರಡು ದಿನಗಳ ತರಬೇತಿ ನೀಡಲಾಗುತ್ತದೆ. ಈ ಜಾನಪದ ಜಾತ್ರೆಯನ್ನು ಪ್ರತಿಯೊಂದು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಪ್ರತಿ ಜಿಲ್ಲೆಗೂ 5 ಲಕ್ಷ ರೂ. ಅನುದಾನ ಮೀಸಲಿರಿಸಲಾಗಿದೆ. ಆದರೆ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ವಿಶೇಷ ಯೋಜನೆ ಎಂದು ಪರಿಗಣಿಸಿ 30 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ. ಸಿದ್ಧಾರೂಢ ಮಠದ ಟ್ರಸ್ಟ್ ಕಮಿಟಿ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಆಹಾರ ಇಲಾಖೆ ಜಂಟಿ ನಿರ್ದೇಶಕ ಸದಾಶಿವ ಮರ್ಜಿ, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ, ಮಠದ ಟ್ರಸ್ಟ್ ಕಮಿಟಿ ಚೇರ್ಮೇನ್ ಡಿ.ಡಿ. ಮಾಳಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಡಾ| ರಾಮು ಮೂಲಗಿ, ಪ್ರಕಾಶ ಮಲ್ಲಿಗವಾಡ ಇದ್ದರು.