ಚಾಮರಾಜನಗರ: ಕೋವಿಡ್-19 ಹರಡುವಿಕೆ ತಡೆಯುವ ಸಂಬಂಧ ನಿಯೋಜಿತರಾಗಿರುವ ವಿವಿಧ ನೋಡೆಲ್ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಮುಂದುವರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ. ಕಾವೇರಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಮುಂಜಾಗ್ರತಾ ಕ್ರಮಗಳ ಪರಿಶೀಲನಾ ಸಭೆ ನಡೆಸಿದ ಅವರು, ಮಾಸ್ಕ್, ಸ್ಯಾನಿಟೈಸರ್ ಇತರೆ ಸುರಕ್ಷತಾ ಸಾಧನಗಳಿಗೆ ಕೊರತೆಯಾಗಬಾರದು. ಅಗತ್ಯಕ್ಕೆ ತಕ್ಕಂತೆ ಪೂರೈಸಬೇಕು. ಔಷಧಗಳ ದಾಸ್ತಾನು ಕೂಡ ಇರಬೇಕು ಎಂದರು.
ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಮುಂದುವರಿಯಬೇಕು. ರೈತರು ಬೆಳೆದ ತೋಟಗಾರಿಕೆ, ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ದೊರೆಯುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅವಶ್ಯಕ ಕ್ರಮಗಳಿಗೆ ಮುಂದಾಗಬೇಕು. ಕೃಷಿ ಚಟುವಟಿಕೆಗಳಿಗೆ ಪೂರಕವಾಗಿರುವ ಬಿತ್ತನೆ ಬೀಜ, ಗೊಬ್ಬರ ಕೃಷಿ ಪರಿಕರಗಳು ಲಭ್ಯವಾಗಬೇಕು. ತರಕಾರಿ, ಹಣ್ಣು, ಹಾಲು, ಸೇರಿದಂತೆ ದಿನಬಳಕೆಯ ಸಾಮಗ್ರಿಗಳಿಗೆ ಕೊರತೆಯಾಗಬಾರದು. ಆಶ್ರಯ ಶಿಬಿರಗಳಲ್ಲಿಯೂ ಕೊರತೆ ಇಲ್ಲದಂತೆ ನೋಡಿಕೊಳ್ಳಬೇಕೆಂದರು.
ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಮಾತನಾಡಿ, ರೈತಸಂಪರ್ಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಬೇಕಾಗಿರುವ ಸಾಮಗ್ರಿಗಳನ್ನು ಬೇಡಿಕೆಗೆ ಅನುಗುಣವಾಗಿ ಸಾಕಷ್ಟು ಮುಂಚಿತವಾಗಿಯೇ ಪಟ್ಟಿ ಸಲ್ಲಿಸಿ ದಾಸ್ತಾನು ಮಾಡಿಕೊಳ್ಳುವಂತೆ ಸೂಚಿಸಿದರು.
ಜಿಪಂ ಸಿಇಒ ನಾರಾಯಣರಾವ್, ಎಸ್ಪಿ ಆನಂದಕುಮಾರ್, ಎಡೀಸಿ ಆನಂದ್, ಎಸಿ ನಿಖೀತಾ, ಡಿಎಚ್ ಡಾ. ರವಿ, ಡಿಯುಡಿಸಿ ಯೋಜನಾ ನಿರ್ದೇಶಕ ಸುರೇಶ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.