Advertisement
ಹಲವು ರೀತಿ ವ್ಯಾಖ್ಯಾನರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಅಧಿಕೃತವಾಗಿ ಚರ್ಚಿಸಿ ಹೈಕಮಾಂಡ್‌ಗೆ ಹೆಸರು ಕಳುಹಿಸಿದ್ದರೂ, ಪಕ್ಷದ ಹೈಕಮಾಂಡ್ ವಿಜಯೇಂದ್ರ ಅವರ ಹೆಸರನ್ನು ನಿರಾಕರಣೆ ಮಾಡಿರುವುದು ರಾಜ್ಯ ಬಿಜೆಪಿಯಲ್ಲಿ ಹಲವಾರು ರೀತಿಯ ವ್ಯಾಖ್ಯಾನಕ್ಕೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪುತ್ರನಿಗೆ ಏನಾದರೂ ಅಧಿಕಾರ ಕೊಡಿಸಬೇಕೆಂಬ ಕಾರಣಕ್ಕೆ ಅವರ ಹೆಸರು ಪರಿಷತ್ ಸಂಭಾವ್ಯರ ಪಟ್ಟಿಯಲ್ಲಿ ಬರುವಂತೆ ನೋಡಿಕೊಂಡಿದ್ದರು ಎನ್ನಲಾಗುತ್ತಿದೆ.
ಪಕ್ಷದ ಉನ್ನತ ಮೂಲಗಳ ಪ್ರಕಾರ ಬಿ.ವೈ. ವಿಜಯೇಂದ್ರ ಅವರಿಗೆ ಚುನಾವಣೆಯಲ್ಲಿ ನಿಂತು ಗೆದ್ದು ಬರುವ ಶಕ್ತಿ ಇದೆ. ಅಲ್ಲದೇ ಅವರಿಗೆ ರಾಜಕೀಯದಲ್ಲಿ ಇನ್ನೂ ಸಾಕಷ್ಟು ಅವಕಾಶಗಳು ದೊರೆಯಲಿವೆ ಎನ್ನುವ ಕಾರಣಕ್ಕೆ ಬಿಜೆಪಿ ಹೈಕಮಾಂಡ್ ಚುನಾವಣೆಯಲ್ಲಿ ಗೆಲ್ಲಲಾಗದ ವ್ಯಕ್ತಿಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಅವರ ಹೆಸರನ್ನು ಕೈ ಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಪಕ್ಷದ ರಾಷ್ಟ್ರೀಯ ನಾಯಕರು ವಿಜಯೇಂದ್ರ ಅವರಿಗೆ ಸೋಮವಾರವೇ ಮಾಹಿತಿ ನೀಡಿ, ಟಿಕೆಟ್‌ಗಾಗಿ ಕಾಯದಂತೆ ಸೂಚನೆ ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಶಿಕಾರಿಪುರದಿಂದ ವಿಜಯೇಂದ್ರ?
ಯಡಿಯೂರಪ್ಪ ಅವರಿಗೆ 80 ವರ್ಷ ವಯಸ್ಸಾಗುತ್ತಿರುವುದರಿಂದ ಅವರು ಪ್ರತಿನಿಧಿಸುವ ಶಿಕಾರಿಪುರ ಕ್ಷೇತ್ರದಿಂದಲೇ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಿ, ಅಲ್ಲಿಂದ ಸ್ಪರ್ಧಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
Related Articles
ಈ ಬೆಳವಣಿಗೆಯಿಂದ ಬಿ.ಎಸ್. ಯಡಿಯೂರಪ್ಪ ಬೇಸರಗೊಂಡಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಚಟುವಟಿಕೆಗಳಲ್ಲಿ, ರಾಜ್ಯ ಪ್ರವಾಸ ಕೈಗೊಳ್ಳುವ ಸಂದರ್ಭ ಎಷ್ಟರ ಮಟ್ಟಿಗೆ ಸಕ್ರಿಯವಾಗಿ ತೊಡಗಿಕೊಳ್ಳುತ್ತಾರೆ ಎನ್ನುವ ಬಗ್ಗೆ ಬಿಜೆಪಿಯಲ್ಲಿ ಚರ್ಚೆಗಳು ನಡೆಯುತ್ತಿವೆ.
Advertisement
ವಿಜಯೇಂದ್ರ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್‌ನ ನಿರ್ಧಾರ ಮುಂದಿನ ದಿನಗಳಲ್ಲಿ ಯಡಿಯೂರಪ್ಪ ಮತ್ತು ಪಕ್ಷದ ನಡುವಿನ ಶೀತಲ ಸಮರ ಮತ್ತಷ್ಟು ಬಿಗಡಾಯಿಸುವಂತೆ ಮಾಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳಾಗಿರುವ ಛಲವಾದಿ ನಾರಾಯಣಸ್ವಾಮಿ, ಲಕ್ಷ್ಮಣ ಸವದಿ, ಕೇಶವ ಪ್ರಸಾದ್, ಬಸವರಾಜ ಹೊರಟ್ಟಿ ಹಾಗೂ ಹೇಮಲತಾ ನಾಯಕ್ ಅವರಿಗೆ ಅಭಿನಂದನೆಗಳು. ಈ ಎಲ್ಲ ಅಭ್ಯರ್ಥಿಗಳು ಜಯಗಳಿಸಿ ವಿಧಾನ ಪರಿಷತ್ತಿನಲ್ಲಿ ಜನರ ಧ್ವನಿಯನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ಹಾರೈಸುವೆ– ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ