ಹಾವೇರಿ: ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹಾಯಕಿಯರಿಗೆ ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು.
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿದರು.
ಗೋವಾ ಸರ್ಕಾರ ಅಂಗನವಾಡಿ ಕಾರ್ಯಕರ್ತೆರಿಗೆ ಸೇವಾ ಅವಧಿಯ ಆಧಾರದ ಮೇಲೆ ಗೌರವ ಧನ ನೀಡುತ್ತಿದ್ದು, ಇದೇ ಮಾದರಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಬೇಕು. ಜಿಲ್ಲೆಯಲ್ಲಿರುವ 1914 ಅಂಗನವಾಡಿ ಕೇಂದ್ರಗಳನ್ನು ಕಿಂಡರ್ ಗಾರ್ಡ್‌ನ್‌ಗಳಾಗಿ ಪರಿವರ್ತಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸುವ ಮೂಲಕ ಅಂಗನವಾಡಿ ನರ್ಸರಿ ಸ್ಕೂಲ್ನಿಂದ ಸರ್ಟಿಫಿಕೆಟ್ ತರುವ ಮಕ್ಕಳಿಗೆ ಪ್ರಾಥಮಿಕ ಶಾಲೆಗಳಿಗೆ ಸೇರಿಸಿಕೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.
ಜು. 6ರಂದು ಸಹ ಧರಣಿ ಸತ್ಯಾಗ್ರಹ ಮುಂದುವರೆಯಲಿದ್ದು, ಈ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆರು ಹಾಸಿಗೆ ಸಮೇತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ಜಿಲ್ಲಾ ಸಮಿತಿಯ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ, ಪ್ರಧಾನ ಕಾರ್ಯದರ್ಶಿ ಜಿ.ಡಿ. ಪೂಜಾರ, ಸಂಚಾಲಕಿ ಸುನಂದಮ್ಮ ರೇವಣಕರ, ಲಲಿತಾ ನಾಗನಗೌಡ್ರ, ಜಯಮ್ಮ ದೇಸಳ್ಳಿ, ಶೀವಲೀಲಾ ಪಾಟೀಲ, ಗುರುನಾಥ ಲಕಮಾಪೂರ, ಬೇಬಿ ನಡುವಿನಮಠ ಸೇರಿದಂತೆ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಇದ್ದರು.