ಆನೇಕಲ್: ಅರಣ್ಯ ಇಲಾಖೆಯ ನೂತನ ಸಚಿವ ಆನಂದ್ ಸಿಂಗ್ ಶುಕ್ರವಾರ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಭೇಟಿ ನೀಡಿ ಪಾರ್ಕ್, ಜೂ ವೀಕ್ಷಣೆ ಮಾಡಿದ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮಧ್ಯಾಹ್ನ ಉದ್ಯಾನವನಕ್ಕೆ ಆಗಮಿಸಿದ ಸಚಿವರು, ಅಧಿಕಾರಿಗಳ ಜೊತೆ ಹುಲಿ ,ಸಿಂಹ, ಕರಡಿ ಸಫಾರಿ ವೀಕ್ಷಣೆ ಮಾಡಿದ ನಂತರ ಸೀಗೆ ಕಟ್ಟೆ ಬಳಿ ಇರುವ ಆನೆ ಶಿಬಿರಕ್ಕೆ ಭೇಟಿ ನೀಡಿ, ಅಲ್ಲಿರುವ ಆನೆಗಳ ಜೊತೆ ಕೆಲ ಹೊತ್ತು ಸಮಯ ಕಳೆದರು. ಆನೆ ಮರಿಗಳನ್ನ ಯಾವ ರೀತಿ ಆರೈಕೆ ಮಾಡಲಾಗುತ್ತದೆ ಎಂದು ಮಾಹಿತಿ ಪಡೆದರು. ಮಾವುತರ ಯೋಗಕ್ಷೇಮ ವಿಚಾರಿಸಿದರು.
ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬನ್ನೇರುಘಟ್ಟ ಉದ್ಯಾನವನದಲ್ಲಿ ಅರಣ್ಯ ಇಲಾಖೆಯಿಂದ ಆಗಬೇಕಾಗಿರುವ ಅಭಿವೃದ್ಧಿಯ ಕಾರ್ಯಗಳ ಬಗ್ಗೆ ತಿಳಿದುಕೊಳ್ಳಲು, ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲು ಬನ್ನೇರುಘಟ್ಟಕ್ಕೆ ಆಗಮಿಸಿದ್ದೇನೆ ಎಂದು ತಿಳಿಸಿದರು.
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕೆರೆಗಳಲ್ಲಿ ಸಾಕಷ್ಟು ನೀರಿದ್ದು ,ಈ ಬಾರಿ ಕುಡಿಯುವ ನೀರಿಗೆ ತೊಂದರೆ ಇಲ್ಲ . ಮುಂದಿನ ದಿನಗಳಲ್ಲಿ ಕಾವೇರಿ ನದಿ ಕುಡಿಯುವ ನೀರು ಒದಗಿಸಲು ಸಾಧ್ಯವಾದರೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಅರಣ್ಯ ಇಲಾಖೆಯಲ್ಲಿ ಈಗಾಗಲೇ ರಾಜ್ಯಾದ್ಯಂತ ಗುತ್ತಿಗೆ ಆಧಾರದ ಮೇಲೆ ಸಾಕಷ್ಟು ಜನರು ಕೆಲಸ ಮಾಡುತ್ತಿದ್ದಾರೆ. ಅವರನ್ನು ಖಾಯಂ ಮಾಡುವ ಕುರಿತು ಮುಖ್ಯಮಂತ್ರಿಗಳ ಜೊತೆ ಚಿರ್ಚಿಸಿ ತೀರ್ಮಾನಿಸಲಾಗುವುದು ಎಂದರು. ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರವಿ ಮಾತನಾಡಿ, ರಾಜ್ಯದಲ್ಲಿ ಗುತ್ತಿಗೆ ಆಧಾರದ ಮೇಲೆ 15-20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಬನ್ನೇರುಘಟ್ಟ ಉದ್ಯಾನವನ 202 ಹಾಗೂ ಮೈಸೂರು ಮೃಗಾಲಯದ 168 370 ದಿನಗೂಲಿ ನೌಕರರನ್ನು ಕಾಯಂ ಮಾಡಲು ಪ್ರಾಧಿಕಾರ ನಿರ್ಧರಿಸಿದೆ ಎಂದು ತಿಳಿಸಿದರು.
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಹಣಾಧಿಕಾರಿ ವನಶ್ರೀ ವಿಪಿನ್ ಸಿಂಗ್, ಡಿಡಿ ಕುಶಾಲಪ್ಪ ಹಾಗೂ ಅರಣ್ಯ ಇಲಾಖೆ ಪ್ರಾಧಿಕಾರದ ಅಧಿಕಾರಿಗಳು ಹಾಜರಿದ್ದರು.