ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಕಾಟ ಹೆಚ್ಚುತ್ತಿದೆ. ಹಿಂಡು ಹಿಂಡು ಕಾಡಾನೆಗಳು ಕಾಫಿ ತೋಟಗಳಿಗೆ ಲಗ್ಗೆ ಇಟ್ಟು ಬೆಳೆ ಹಾಳು ಮಾಡುತ್ತಿವೆ.
ಹೀಗಾಗಿ ಜನರು ಜೀವಭಯದಲ್ಲಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯಿಂದ ಮಲೆನಾಡು ಭಾಗದಲ್ಲಿ ಬೆಳೆ ಹಾನಿಯಾಗಿದ್ದರೆ ಈಗ ಕಾಡಾನೆಗಳ ಹಾವಳಿಯಿಂದ ಬೆಳೆ ನಷ್ಟ ಉಂಟಾಗುತ್ತಿದೆ.
ಮೂಡಿಗೆರೆ ತಾಲೂಕಿನ ಸಾಲ್ಮರ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆಯೇ 20ಕ್ಕೂ ಹೆಚ್ಚಿದ್ದ ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿರುವುದನ್ನು ಅಲ್ಲೇ ಇದ್ದವರು ಮೊಬೈಲ್‌ನಲ್ಲಿ ವೀಡಿಯೋ ಮಾಡಿದ್ದಾರೆ.
ಪ್ರತಿನಿತ್ಯ ಒಂದು ಕಾಫಿ ತೋಟದಿಂದ ಮತ್ತೂಂದು ಕಾಫಿ ತೋಟಕ್ಕೆ ಲಗ್ಗೆ ಇಡುತ್ತಿವೆ. ಹೊಸಪುರ, ಕಸ್ಕೆಬೈಲು, ಜಿ. ಹೊಸಳ್ಳಿ ಗ್ರಾಮದ ಸುತ್ತಮುತ್ತಲ ಕಾಫಿ ತೋಟಗಳಿಗೆ ಲಗ್ಗೆ ಇಡುತ್ತಿದ್ದು ತೋಟದ ಮಾಲಕರು ನಷ್ಟ ಅನುಭವಿಸುತ್ತಿದ್ದಾರೆ.
ಕಾಡಾನೆಗಳು ಈ ಭಾಗದಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿದ್ದು ವಾಹನ ಸವಾರರು, ಕಾಫಿತೋಟಕ್ಕೆ ತೆರಳುವ ಕಾರ್ಮಿಕರು ತೋಟಗಳಿಗೆ ತೆರಳಲು ಭಯ ಪಡುತ್ತಿದ್ದಾರೆ.
ಯಾವುದೇ ಅನಾಹುತ ಸಂಭವಿಸುವ ಮೊದಲು ಅರಣ್ಯ ಇಲಾಖೆ ಅಧಿಕಾರಿಗಳು, ಸಿಬಂದಿ ಕಾಡಾನೆಗಳ ಹಿಂಡನ್ನು ಕಾಡಿಗೆ ಅಟ್ಟಲು ಮುಂದಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.