Advertisement

“ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಿತಿ ರಚನೆ’

09:56 PM Sep 27, 2019 | Team Udayavani |

ಮಹಾನಗರ: ಪ್ರವಾಸೋದ್ಯಮ ಅಭಿವೃದ್ಧಿಗೆ ಮುಖ್ಯಮಂತ್ರಿ ಯಡಿ ಯೂರಪ್ಪ ಅವರು ಇನ್ಫೋಸಿಸ್‌ ಪ್ರತಿಷ್ಠಾನ ಅಧ್ಯಕ್ಷೆ ಸುಧಾಮೂರ್ತಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದಾರೆ. ಈ ಸಮಿತಿ ಮೂಲಕ ಕರಾವಳಿಯ ಪ್ರವಾಸಿ ತಾಣಗಳ ಅಭಿವೃದ್ಧಿ ಮಾಡಲಾಗುವುದು ಎಂದು ಮುಜರಾಯಿ, ಬಂದರು, ಮೀನುಗಾರಿಕೆ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Advertisement

ದ.ಕ. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ದಕ್ಷಿಣ ಕನ್ನಡ ಹೊಟೇಲ್‌ ಆ್ಯಂಡ್‌ ರೆಸ್ಟೋರೆಂಟ್‌ ಅಸೋಸಿಯೇಶನ್‌ ವತಿಯಿಂದ ನಗರದ ಪುರಭವನದಲ್ಲಿ ಶುಕ್ರವಾರ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ 2019 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬೀಚ್‌ ಅಭಿವೃದ್ಧಿ, ಹಿನ್ನೀರಿನಲ್ಲಿ ಬೋಟ್‌ ಹೌಸ್‌ಗಳ ನಿರ್ಮಾಣ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕನಸಾಗಿದೆ. ಇದರ ಜತೆಗೆ ಕರಾವಳಿಯಲ್ಲಿ ದೇವಸ್ಥಾನ ಮತ್ತು ಐತಿಹಾಸಿಕ ಸ್ಥಳಗಳ ಪ್ರವಾಸೋದ್ಯಮಕ್ಕೆ ಇನ್ನಷ್ಟು ಆದ್ಯತೆ ನೀಡಬೇಕಿದೆ. ಈ ಬಗ್ಗೆ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ರಚಿಸಿದ ಸಮಿತಿಯಲ್ಲಿ ಚರ್ಚಿಸಲಾಗುವುದು. ಈ ಸಮಿತಿಗೆ ಮೊದಲ ಹಂತದಲ್ಲಿ 500 ಕೋಟಿ ರೂ. ನೀಡಲು ಸಿದ್ಧ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ಅನುದಾನದಲ್ಲಿ ಕರಾವಳಿ ಪ್ರದೇಶದ ಪ್ರವಾಸಿ ತಾಣಗಳನ್ನೂ ಅಭಿವೃದ್ಧಿ ಮಾಡಲಾಗುವುದು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ, ಮನಪಾ ಆಯುಕ್ತ ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ, ಕುಡಿ ಜಗದೀಶ ಶೆಣೈ, ಕೆಸಿಸಿಐ ಅಧ್ಯಕ್ಷ ಐಸಾಕ್‌ ವಾಜ್‌ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಡಾ| ಉದಯ ಶೆಟ್ಟಿ ಉಪಸ್ಥಿತರಿದ್ದರು. ಮಂಜುಳಾ ಶೆಟ್ಟಿ ನಿರೂಪಿಸಿ, ವಂದಿಸಿ ದರು. ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕುದ್ರುಗಳ ಅಭಿವೃದ್ಧಿ ಯೋಜನೆ
ಅಧ್ಯಕ್ಷತೆ ವಹಿಸಿದ್ದ ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ಮಂಗಳೂರಿನಲ್ಲಿರುವ ಆರು ಕುದ್ರುಗಳನ್ನು ಅಭಿವೃದ್ಧಿಪಡಿಸುವ ಮೂಲಕ ಪ್ರವಾಸಿಗರನ್ನು ಆಕರ್ಷಿಸಲು ಯೋಜನೆ ರೂಪಿಸಲಾಗುವುದು. ಈ ಕುದ್ರುಗಳ ಅಭಿವೃದ್ಧಿಗೆ ಸಂಬಂಧಿಸಿ ಈಗಾಗಲೇ 3 ಸುತ್ತಿನ ಸಭೆ ನಡೆದಿದೆ. ಈ ಬಗ್ಗೆ ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರ ಜತೆ ನಡೆಸಿದ ಮಾತುಕತೆಯ ಬಳಿಕ ಜಿಲ್ಲಾಡಳಿತ ಮೂಲಕ ಪ್ರಸ್ತಾವನೆ ಸಲ್ಲಿಸುವಂತೆ ಅವರು ಸೂಚಿಸಿದ್ದಾರೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಲಾಗುವುದು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next