Advertisement

ನಾಳೆ ಹುಬ್ಬಳ್ಳಿಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಸಭೆ

09:06 AM Aug 01, 2022 | Team Udayavani |

ಬೆಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಆ. 2ರಂದು ಹುಬ್ಬಳ್ಳಿಗೆ ಆಗಮಿಸಲಿದ್ದು, ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆ ನಡೆಸಲಿದ್ದಾರೆ.

Advertisement

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮದಿನಾಚರಣೆ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದಾವಣಗೆರೆಗೆ ಆಗಮಿಸುತ್ತಿರುವ ರಾಹುಲ್‌ ಗಾಂಧಿ ಆ. 2ರಂದು ದಿಲ್ಲಿಯಿಂದ ಹುಬ್ಬಳ್ಳಿಗೆ ಆಗಮಿಸಿ, ಹುಬ್ಬಳ್ಳಿಯಲ್ಲಿ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಡೆಸುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಹಲವು ವಿಷಯ ಚರ್ಚೆ
ಮುಂಬರುವ ಎಂಟು ತಿಂಗಳಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಈ ಸಂದರ್ಭ ರಾಜ್ಯ ಕಾಂಗ್ರೆಸ್‌ ನಾಯಕರಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಬಗ್ಗೆ ಬಹಿರಂಗವಾಗಿಯೇ ಹೇಳಿಕೆಗಳನ್ನು ನೀಡುತ್ತಿರುವುದು. ಕಾಂಗ್ರೆಸ್‌ನಲ್ಲಿ ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ.

ಗೊಂದಲ ನಿವಾರಣೆಗೆ ರಾಹುಲ್‌ ಗಾಂಧಿ ಮುಂದಾಗಿದ್ದಾರೆ ಎನ್ನಲಾಗಿದ್ದು, ಇದೇ ಕಾರಣಕ್ಕೆ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆ ಕರೆದಿದ್ದಾರೆಂದು ಕಾಂಗ್ರೆಸ್‌ ಉನ್ನತ ಮೂಲಗಳು ತಿಳಿಸಿವೆ.

ರಾಜಕೀಯ ವ್ಯವಹಾರಗಳ ಸಮಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ, ಕೆಪಿಸಿಸಿ ಕಾರ್ಯಾಧ್ಯಕ್ಷರು, ರಾಜ್ಯದಿಂದ ನೇಮಕಗೊಂಡಿರುವ ಎಐಸಿಸಿ ಕಾರ್ಯ ದರ್ಶಿಗಳು ಸೇರಿ ಮೂವತ್ತಕ್ಕೂ ಹೆಚ್ಚು ಪ್ರಮುಖ ನಾಯಕರು ಇದ್ದಾರೆ.

Advertisement

ಮಠಗಳ ಭೇಟಿಗೆ ರಾಹುಲ್‌ಗೆ ಬೇಡಿಕೆ
ರಾಹುಲ್‌ ಗಾಂಧಿ ಎರಡು ದಿನ ರಾಜ್ಯ ಪ್ರವಾಸದಲ್ಲಿದ್ದು, ರಾಜ್ಯದ ಪ್ರಮುಖ ವೀರಶೈವ ಲಿಂಗಾಯತ ಮಠಗಳಿಗೆ ಭೇಟಿ ನೀಡುವಂತೆ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭ ಮೂರುಸಾವಿರ ಮಠಕ್ಕೆ ಭೇಟಿ ನೀಡಲು ಮನವಿ ಮಾಡಿಕೊಳ್ಳಲಾಗಿದ್ದು, ರಾಹುಲ್‌ ಗಾಂಧಿ ಭೇಟಿ ನೀಡುವ ಸಾಧ್ಯತೆ ಇದೆ. ಅನಂತರ ಸಿದ್ದರಾಮೋತ್ಸವ ಕಾರ್ಯಕ್ರಮದ ದಿನ ಚಿತ್ರದುರ್ಗದ ಮುರುಘಾ ಮಠ, ಸಾಣೆಹಳ್ಳಿ ಮಠಗಳಿಗೆ ಭೇಟಿ ನೀಡುವಂತೆ ರಾಜ್ಯ ನಾಯಕರು ಮನವಿ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next