Advertisement

ಸಂಕಷ್ಟದ ಸಮಯದಲ್ಲಿ ಶಾಸಕರಿಗೆ ನಿಗಮ ಮಂಡಳಿ ಸ್ಥಾನದ ಉಡುಗೊರೆ ನೀಡಿದ್ದಾರೆ:ಕುಮಾರಸ್ವಾಮಿ ಟೀಕೆ

05:14 PM Jul 27, 2020 | keerthan |

ಬೆಂಗಳೂರು: ಕೋವಿಡ್-19 ಸಂಕಷ್ಟ ಸಮಯದಲ್ಲಿ ಬದುಕಿಗಾಗಿ ಜನತೆ ಹೋರಾಟ ಮಾಡುತ್ತಿದ್ದರೆ, ವರ್ಷಾಚರಣೆಯ ಸಂಭ್ರಮದಲ್ಲೂ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿನಲ್ಲಿ ತನ್ಮಯವಾಗಿರುವ ಬಿಜೆಪಿ ಸರ್ಕಾರ 24 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಉಡುಗೊರೆ ನೀಡುವ ಮೂಲಕ ಜನತೆಯ ಆಶೋತ್ತರಗಳಿಗೆ ಕೊಳ್ಳಿ ಇಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸರ್ಕಾರ ಮಾತ್ರವಲ್ಲ, ಜನತೆಯು ಕೂಡ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವಾಗ ಬೊಕ್ಕಸ ಹಾಗೂ ಜನ ಸಾಮಾನ್ಯನ ಮೇಲೆ ಹೊರೆ ಹೇರುವ ಮೂಲಕ ‘ಶಾಸಕರಿಗೆ ಉಡುಗೊರೆ, ಜನತೆಗೆ ಬರೆ’ ಎಳೆಯುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಲಜ್ಜ ನಡವಳಿಕೆಯನ್ನು ಖಂಡಿಸುತ್ತೇನೆ ಎಂದಿದ್ದಾರೆ.

ಬಿಜೆಪಿ ಸರ್ಕಾರಕ್ಕೆ ಸಾಮಾನ್ಯರ ಹಿತ ಮುಖ್ಯವೋ? ಕುರ್ಚಿ ಉಳಿಸಿಕೊಳ್ಳಲು ಶಾಸಕರ ಹಿತ ಮುಖ್ಯವೋ? ರಾಜ್ಯದ ಜನತೆಗೆ ಉಡುಗೊರೆ ಕೊಡಬೇಕಾಗಿದ್ದ ಸರ್ಕಾರ ಶಾಸಕರ ತೃಪ್ತಿಪಡಿಸುವ ಅನಾಚಾರ ಪ್ರದರ್ಶಿಸಿದೆ. ರಾಜ್ಯ ಎದುರಿಸುತ್ತಿರುವ ಇಂತಹ ಸಂಕಷ್ಟದ ಸಮಯದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಗಾದಿಯ ಮೇಲೆ ಸವಾರಿ ಮಾಡುವುದು ವಿಹಿತವೇ ಎಂಬುದನ್ನು ಶಾಸಕರು ಆತ್ಮಸಾಕ್ಷಿಗೆ ಪ್ರಶ್ನೆ ಮಾಡಿಕೊಳ್ಳಿ ಎಂದು ಎಚ್ ಡಿಕೆ ಟೀಕಿಸಿದರು.

“ಹಗಲನಿರುಳು ಮಾಡಿ, ಇರುಳ ಹಗಲ ಮಾಡಿ, ಆಚಾರವ ಅನಾಚಾರವ ಮಾಡಿ, ಅನಾಚಾರವ ಆಚಾರವ ಮಾಡಿ, ಭಕ್ತನ ಭವಿಯ ಮಾಡಿ, ಭವಿಯ ಭಕ್ತನ ಮಾಡಿ, ನುಡಿವವರ ಮಾತ ಕೇಳಲಾಗದು ಗುಹೇಶ್ವರಾ” ಎಂದು ಎಚ್ ಡಿಕೆ ಟ್ವೀಟ್ ಮಾಡಿದರು.

 

Advertisement

Advertisement

Udayavani is now on Telegram. Click here to join our channel and stay updated with the latest news.

Next