ದೊಡ್ಡಬಳ್ಳಾಪುರ: ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಅವರು ಕಾಂಗ್ರೆಸ್ ಪಕ್ಷ ಸೇರುವ ಕುರಿತಾದ ಚರ್ಚೆಗೆ ಶೀಘ್ರದಲ್ಲಿಯೇ ತೆರೆ ಬೀಳಲಿದ್ದು, ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ.
ಸೋಮವಾರ ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚುಂಚೇಗೌಡ, ಹಿರಿಯ ನಾಯಕ ಸಿ.ಡಿ.ಸತ್ಯನಾರಾಯಣಗೌಡ ಅವರೊಂದಿಗೆ ಜೆ.ನರಸಿಂಹಸ್ವಾಮಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರುವ ಕುರಿತು ಚರ್ಚೆ ನಡೆಸಲಾಗಿದ್ದು, ನರಸಿಂಹಸ್ವಾಮಿ ಸೇರ್ಪಡೆಗೆ ಸಿದ್ದರಾಮಯ್ಯ ಕೂಡ ಹಸಿರು ನಿಶಾನೆ ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
2008ರಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಜೆ.ನರಸಿಂಹಸ್ವಾಮಿ ನಂತರದ ರಾಜಕೀಯ ಬೆಳವಣಿಗೆಯಲ್ಲಿ ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆಯಾಗಿ ಕೊಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿದ್ದರು. ನಂತರ 2013ರಲ್ಲಿ ಹಾಗೂ 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ನಂತರದ ತಾಲೂಕಿನಲ್ಲಿ ಬಿಜೆಪಿ ಪಕ್ಷದಲ್ಲಿ ಇದ್ದೂ ಇಲ್ಲದಂತಾಗಿದ್ದರು. ಇತ್ತೀಚೆಗಷ್ಟೇ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ಟಿ.ವಿ.ಲಕ್ಷ್ಮೀನಾರಾಯಣ, ಸಾರಥಿ ಸತ್ಯ ಪ್ರಕಾಶ್ ಹಾಗೂ ಬಿಜೆಪಿ ಮುಖಂಡರೊಂದಿಗೆಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಸ್ಥಳೀಯ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದರು.
ರಾಜಕೀಯ ವಲಯದಲ್ಲಿ ಚರ್ಚೆ: ಈ ಹಿಂದೆ ಬಿಜೆಪಿ ಫಲಾನುಭವಿಗಳ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಧೀರಜ್ ಮುನಿರಾಜು ಅವರನ್ನೂ ಭೇಟಿ ಮಾಡಿ ಕುತೂಹಲ ಮೂಡಿಸಿದ್ದರು. ಬದಲಾದ ಬೆಳವಣಿಗೆಯಲ್ಲಿ ದಿಢೀರ್‌ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದಜೆ.ನರಸಿಂಹಸ್ವಾಮಿ ಅವರು ಬೇಷರತ್ ಕಾಂಗ್ರೆಸ್ ಸೇರುವಇಚ್ಛೆ ವ್ಯಕ್ತಪಡಿಸಿದ್ದಾರೆ. ಮೂರು ದಿನಗಳಲ್ಲಿ ಈ ಕುರಿತನಿರ್ಧಾರ ಅಧಿಕೃತವಾಗಿ ಪ್ರಕಟವಾಗಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.