ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 30 ವರ್ಷಗಳ ಜನತಾ ಪರಿವಾರದಲ್ಲಿ ರಾಜಕೀಯ ಜೀವನ ನಡೆಸಿದ ಮಾಜಿ ಶಾಸಕ ಎಂ.ರಾಜಣ್ಣ ಅವರು ಜಿಲ್ಲಾ ಉಸ್ತುವಾರಿ ಸಚಿವ ಡಾ ಕೆ.ಸುಧಾಕರ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷದಲ್ಲಿ ಸೇರ್ಪಡೆಯಾದರು.
ನಗರದ ಸಿದ್ದೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾಜಿ ಶಾಸಕ ಎಂ.ರಾಜಣ್ಣ, ಜಿಪಂ ಸದಸ್ಯ ಡಾ.ಜಯರಾಂರೆಡ್ಡಿ ಮತ್ತು ಅವರ ಬೆಂಬಲಿಗರು ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಮೆಚ್ಚಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷದಲ್ಲಿ ಸೇರ್ಪಡೆಯಾದರು.
ಇದೇ ಸಂದರ್ಭದಲ್ಲಿ ಭೂ ಅಭಿವೃದ್ಧಿ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಅಶ್ವತ್ಥನಾರಾಯಣ, ಶಿವಾರೆಡ್ಡಿ, ಅಬ್ಲೂಡು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕನಕಪ್ರಸಾದ್, ಎಸ್.ರಹಮತ್ತುಲ್ಲಾ, ಕುಂದಲಗುರ್ಕಿ ಗ್ರಾಪಂ ಮಾಜಿ ಉಪಾಧ್ಯಕ್ಷ ಆಂಜಿನಪ್ಪ ಸೇರಿದಂತೆ ನೂರಾರು ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾದರು.
ಇದನ್ನೂ ಓದಿ:ಕಾಂಗ್ರೆಸ್ ನಲ್ಲಿ ಈಗಿರುವುದು ಬಣವಲ್ಲ, ಒಂದೇ ಬಣ್ಣ: ಹರ್ಷ ಮೊಯ್ಲಿ
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ, ಪ್ರಧಾನ ಕಾರ್ಯದರ್ಶಿ ಮರಳಕುಂಟೆ ಕೃಷ್ಣಮೂರ್ತಿ, ಸಹ ವಕ್ತಾರ ರಮೇಶ್ ಬಾಯಿರಿ, ರಾಜ್ಯ ಮಾವು ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆವಿ ನಾಗರಾಜ್, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ನಗರಸಭೆಯ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ (ಬಾಬು) ಮತ್ತಿತರರು ಉಪಸ್ಥಿತರಿದ್ದರು.