Advertisement

Byndoor ಮಾಜಿ ಶಾಸಕ ಸುಕುಮಾರ ಶೆಟ್ಟಿ ಶೀಘ್ರ ಕಾಂಗ್ರೆಸ್‌ಗೆ ಸೇರ್ಪಡೆ ?

01:26 AM Mar 12, 2024 | Team Udayavani |

ಕುಂದಾಪುರ: ಲೋಕಸಭಾ ಚುನಾವಣೆಯ ಕಾವು ಏರುತ್ತಿದ್ದಂತೆ ಬೈಂದೂರಿನ ಬಿಜೆಪಿ ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತಗೊಂಡಿದೆ. ಬೆಂಗಳೂರಿನಲ್ಲಿ ಸೋಮ ವಾರ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

Advertisement

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಉಡುಪಿ ಜಿಲ್ಲೆಯಲ್ಲಿಯೂ ಪಕ್ಷಾಂತರ ಪರ್ವ ಆರಂಭವಾಗಿದೆ. ಕಳೆದ ಬಾರಿ ಬೈಂದೂರು ಶಾಸಕರಾಗಿದ್ದ ಬಿ.ಎಂ. ಸುಕುಮಾರ ಶೆಟ್ಟರು ಬಿಜೆಪಿ ತೊರೆದು, ಕಾಂಗ್ರೆಸ್‌ ಸೇರುವುದು ಖಚಿತವಾಗಿದೆ.

ಸುರ್ಜೇವಾಲಾರನ್ನು ಭೇಟಿಯಾಗಿ ಮಾತುಕತೆ ನಡೆಸಿ, ಪಕ್ಷದ ಸೇರ್ಪಡೆ ವಿಷಯದ ಕುರಿತಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ಮುಖಂಡ ರಾದ ಆಯನೂರು ಮಂಜುನಾಥ್‌, ಸುಧೀರ್‌ ಕುಮಾರ್‌ ಜತೆಗಿದ್ದರು.

ಬಿಜೆಪಿಯಿಂದ ದೂರವಿದ್ದರು ಬಿಜೆಪಿಯಿಂದ ಎರಡು ಬಾರಿ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಿದ್ದು, ಈ ಪೈಕಿ 2013 ರಲ್ಲಿ ಕಾಂಗ್ರೆಸ್‌ನ ಗೋಪಾಲ ಪೂಜಾರಿ ವಿರುದ್ಧ ಸೋತರೆ, 2018 ರಲ್ಲಿ ಅವರನ್ನು ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೇಟು ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಆಗಿನಿಂದಲೂ ಸಾರ್ವಜನಿಕ ಸಭೆ, ಸಮಾರಂಭಗಳಿಂದ ದೂರವಿದ್ದರು. ಆಗಲೇ ಕಾಂಗ್ರೆಸ್‌ ಸೇರ್ಪಡೆ ವಿಚಾರ ಕೇಳಿ ಬಂದಿತ್ತು. ಆದರೆ ಈಗ ಖಚಿತಗೊಂಡಿದೆ.

ಹಲವರ ಭೇಟಿ
ಸುಕುಮಾರ ಶೆಟ್ಟರು ಈ ಹಿಂದೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದರು. ಈಗ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ, ಗೃಹಸಚಿವ ಡಾ| ಜಿ. ಪರಮೇಶ್ವರ್‌, ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

Advertisement

ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ 2-3 ಚುನಾವಣೆಗಳಲ್ಲಿ ಬಿಜೆಪಿಗೆ ಗರಿಷ್ಠ ಅಂತರದ ಮುನ್ನಡೆ ಸಿಗುತ್ತಿದ್ದು, ಅದೇ ದೃಷ್ಟಿಯಿಂದ ಸುಕುಮಾರ ಶೆಟ್ಟರನ್ನು ತಮ್ಮ ಕಡೆಗೆ ಸೆಳೆದುಕೊಂಡರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಗೀತಾ ಶಿವರಾಜ್‌ ಕುಮಾರ್‌ ಅವರಿಗೆ ಅನುಕೂಲ ಆಗಬಹುದು ಅನ್ನುವ ನಿಟ್ಟಿನಲ್ಲಿ ಈಗ ಸೇರ್ಪಡೆಗೆ ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್‌ಗೆ ಸೇರುವುದು ಖಚಿತ. ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ಪ್ರಮುಖ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಸೇರ್ಪಡೆ ಯಾವಾಗ ಅನ್ನುವ ಬಗ್ಗೆ ಊರಿಗೆ ತೆರಳಿ ಹಿತೈಷಿಗಳು, ಬೆಂಬಗಲಿಗರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವೆ.
– ಬಿ.ಎಂ. ಸುಕುಮಾರ ಶೆಟ್ಟಿ, ಬೈಂದೂರು ಮಾಜಿ ಶಾಸಕರು

Advertisement

Udayavani is now on Telegram. Click here to join our channel and stay updated with the latest news.

Next