ಚಾಮರಾಜನಗರ: ರಾಜ್ಯದ ಮೊದಲ ವಿಧಾನಸಭೆಗೆ ಆಯ್ಕೆಯಾಗಿದ್ದ ಚಾಮರಾಜನಗರ ಕ್ಷೇತ್ರದ ಪ್ರಥಮ ಶಾಸಕ ಯು.ಎಂ. ಮಾದಪ್ಪ (96) ಗುರುವಾರ ಮಧ್ಯಾಹ್ನ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾದರು.
ಮಾದಪ್ಪಅವರು ವಯೋಸಹಜ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಮೃತರು ಪತ್ನಿ, ನಾಲ್ವರು ಪುತ್ರರು,
ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಶುಕ್ರವಾರ ಅವರ ಸ್ವಗ್ರಾಮ ತಾಲೂಕಿನ ಉಡಿಗಾಲ ಗ್ರಾಮದ ತೋಟದಲ್ಲಿ ನಡೆಯಲಿದೆ.
ಉಡಿಗಾಲ ಗ್ರಾಮದವರಾದ ಮಾದಪ್ಪ 1952ರಲ್ಲಿ ನಡೆದ ಪ್ರಥಮ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಕಿಸಾನ್ ಮಜ್ದೂರ್ ಪ್ರಜಾ ಪಾರ್ಟಿಯಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು. 1957ರ ವಿಧಾನಸಭಾ ಚುನಾವಣೆಯಲ್ಲೂ ಪ್ರಜಾ ಸೋಷಲಿಸ್ಟ್ ಪಾರ್ಟಿಯಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಬಳಿಕ, ಕಾಂಗ್ರೆಸ್, ಸಂಸ್ಥಾ ಕಾಂಗ್ರೆಸ್, ಜನತಾ ಪಕ್ಷದಲ್ಲಿ ವಿವಿಧ
ಹುದ್ದೆಗಳನ್ನು ನಿರ್ವಹಿಸಿದ್ದರು. 1979ರಲ್ಲಿ ಮೈಸೂರು ಜಿಲ್ಲಾ ಗ್ರಾಮಾಂತರ ಜನತಾಪಕ್ಷದ ಅಧ್ಯಕ್ಷರಾಗಿ ನೇಮಕವಾಗಿದ್ದರು. 1985ರ ತನಕ ಈ ಹುದ್ದೆ ನಿರ್ವಹಿಸಿ, ಸಕ್ರಿಯ ರಾಜಕೀಯದಿಂದ ನಿವೃತ್ತರಾಗಿದ್ದರು.