ಬೆಂಗಳೂರು: ಇಂದು 87ನೇ ವಸಂತಕ್ಕೆ ಕಾಲಿಟ್ಟ ಮಾಜೀ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡರಿಗೆ ವಿವಿಧ ಪಕ್ಷಗಳ ರಾಜಕೀಯ ಮುಖಂಡರು ಶುಭಾಶಯ ಕೋರಿದ್ದಾರೆ.
ಮಾಜೀ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ನಾಯಕ ರಾಮಲಿಂಗಾ ರೆಡ್ಡಿ ಅವರು ತಮ್ಮ ಪುತ್ರಿ ಸೌಮ್ಯಾ ರೆಡ್ಡಿ ಅವರೊಂದಿಗೆ ಹೆಚ್.ಡಿ.ಡಿ. ನಿವಾಸಕ್ಕೆ ತೆರಳಿ ಮಾಜೀ ಪ್ರಧಾನಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು.
ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ರೆಡ್ಡಿ ಅವರು ದೇವೇಗೌಡರ ನಿವಾಸಕ್ಕೆ ತೆರಳಿ ಅವರಿಗೆ ಹೂಗುಚ್ಛವನ್ನು ನೀಡಿ ಜನ್ಮದಿನದ ಶುಭಾಶಯಗಳನ್ನು ತಿಳಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಹೆಚ್.ಡಿ.ಡಿ. ಜನ್ಮದಿನಕ್ಕೆ ತಮ್ಮ ಶುಭಕಾಮನೆಗಳನ್ನು ತಿಳಿಸಿದ್ದಾರೆ.
Related Articles
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದೇವೇಗೌಡರ ಜನ್ಮದಿನಕ್ಕೆ ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ.
ಮಾಜೀ ಮುಖ್ಯಮಂತ್ರಿ ಹಾಗೂ ವಿಧಾನ ಸಭೆಯಲ್ಲಿ ವಿಪಕ್ಷ ನಾಯಕರಾಗಿರುವ ಸಿದ್ಧರಾಮಯ್ಯನವರು ದೇವೇಗೌಡರ ಜನ್ಮದಿನಕ್ಕೆ ಶುಭ ಹಾರೈಸಿ ಟ್ವೀಟ್ ಮಾಡಿದ್ದಾರೆ.
ಇನ್ನುಳಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಆಂಧ್ರಪ್ರದೇಶದ ಮಾಜೀ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೆಪಿಸಿಸಿ ಅಧ್ಯಕ್ಷ ಹಾಗೂ ಶಾಸಕ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಮುಖಂಡರು ದೇವೇಗೌಡರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ.