ಬೆಳಗಾವಿ: ಅಂತರ್ಜಲ ಚೈತನ್ಯ ಹೆಚ್ಚಳ ಮಾಡಲು ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಅವಕಾಶಗಳಿವೆ. ಈ ಜಿಲ್ಲೆಯನ್ನು ಇಡೀ ರಾಜ್ಯಕ್ಕೆ ಮಾದರಿ ಮಾಡಬಹುದು. ಈ ನಿಟ್ಟಿನಲ್ಲಿ ಆರ್ಟ್ ಆಫ್ ಲಿವಿಂಗ್ ಜೊತೆ ಸೇರಿಕೊಂಡು ಈ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಅಂತರ್ಜಲ ಚೈತನ್ಯ ಹಾಗೂ ನರೇಗಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಾಕಷ್ಟು ನೀರಾವರಿ ಸೌಲಭ್ಯ ಇರುವ ಹಾಗೂ ಕಬ್ಬು ಬೆಳೆ ಹೆಚ್ಚಾಗಿರುವ ತಾಲೂಕುಗಳನ್ನು ಹೊರತುಪಡಿಸಿ ಇತರ ಕಡೆಗಳಲ್ಲಿ ಅಂತರ್ಜಲ ಚೈತನ್ಯ ಹೆಚ್ಚಳಕ್ಕೆ ಆದ್ಯತೆ ನೀಡಬೇಕು ಎಂದರು.
ಅಂತರ್ಜಲ ಹೆಚ್ಚಳ ಮಾಡುವ ನಿಟ್ಟಿನಲ್ಲಿ ನರೇಗಾ ಯೋಜನೆ ಹಾಗೂ ಬದು ನಿರ್ಮಾಣಕ್ಕೆ ಸಂಬಂಧಿಸಿದಂತೆ ನಿಗದಿಪಡಿಸಿದ ಗುರಿ ಸಾಧನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿ ಜತೆ ಸಮನ್ವಯತೆ ಸಾಧಿಸುವ ಮೂಲಕ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ಆದಷ್ಟು ಬೇಗ ಭೂಮಿ ಪಡೆದುಕೊಳ್ಳಬೇಕು ಎಂದರು. ನರೇಗಾ ಯೋಜನೆ ಅನುಷ್ಠಾನದ ಕುರಿತು ಮಾಹಿತಿ ನೀಡಿದ ಜಿಪಂ ಸಿಇಒ ಅಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು, ಬೆಳಗಾವಿ ಜಿಲ್ಲೆಗೆ ಒಟ್ಟು 1.20 ಕೋಟಿ ಮಾನವ ದಿನಗಳ ಸೃಜನೆಯ ಗುರಿ ನೀಡಲಾಗಿತ್ತು. ಇದುವರೆಗೆ ಶೇ.42 ಗುರಿ ಸಾಧಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸ್ವಲ್ಪಮಟ್ಟಿಗೆ ನಿಧಾನವಾಗಿ ಕಾಮಗಾರಿ ಆರಂಭಗೊಂಡಿದ್ದು, ಇದೀಗ ಕಾಮಗಾರಿಗಳು ಚುರುಕುಗೊಂಡಿವೆ.
ಹಿರಣ್ಯಕೇಶಿ ನದಿ ವ್ಯಾಪ್ತಿಯಲ್ಲಿ 2,33, 713 ಮಾನವ ದಿನಗಳ ಸೃಜನೆಗೆ ಗುರಿ ಹೊಂದಲಾಗಿದೆ ಎಂದರು. ಜಿಲ್ಲೆಯಲ್ಲಿ 3,444 ಬದು ನಿರ್ಮಾಣ ಗುರಿ ಹೊಂದಲಾಗಿದೆ. ಇದರಿಂದ ಬಹುತೇಕ ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದ ಅವರು, ಜಿಲ್ಲೆಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವ ಪರಿಸ್ಥಿತಿ ಬಂದಿಲ್ಲ ಎಂದು ಮಾಹಿತಿ ನೀಡಿದರು. ಶಾಸಕ ಮಹಾಂತೇಶ ದೊಡ್ಡಗೌಡರ ಮತ್ತು ವಿಧಾನ ಪರಿಷತ್ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿದರು. ಸಚಿವ ಸುರೇಶ ಅಂಗಡಿ, ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ ಇದ್ದರು.