ಬೆಂಗಳೂರು: ರಾಷ್ಟ್ರಧ್ವಜ ಹಾಗೂ ಅಪ್ರಾಪ್ತರನ್ನು ಚುನಾವಣಾ ಪ್ರಚಾರಕ್ಕೆ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರ ವಿರುದ್ಧ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 8ರಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ, ಏ.11ರಂದು ವಿಜಯನಗರ, ಏ.12ರಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರಚಾರ ಸಭೆಗಳಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಬಳಸಿದ್ದು, ಪ್ರಚಾರಕ್ಕೆ ಅನುಮತಿ ಪಡೆದ ಮುಖಂಡರ ಮೇಲೆ ವಿಚಕ್ಷಣ ದಳಗಳು ಮೂರು ಪ್ರಕರಣ ದಾಖಲಿಸಿವೆ ಎಂದರು.
ಇದರೊಂದಿಗೆ ಬಿಜೆಪಿ ಪ್ರಚಾರ ಕರಪತ್ರದಲ್ಲಿ ರಾಷ್ಟ್ರಧ್ವಜ ಬಳಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನೀಡಿದ ದೂರಿನ ಮೇಲೆ ಜಯನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉಳಿದಂತೆ ದಾಖಲೆ ಇಲ್ಲದ ಹಣ ಮತ್ತು ಮದ್ಯ ಸಾಗಾಣೆಗೆ ಸಂಬಂಧಿಸಿದಂತೆ ಈವರೆಗೆ 14 ಪ್ರಕರಣಗಳು ದಾಖಲಾಗಿದ್ದು, ಎಲ್ಲ ಪ್ರಕರಣಗಳು ತನಿಖಾ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು.
ಅಬಕಾರಿ ಇಲಾಖೆಯ ಸಿಬ್ಬಂದಿಯೂ ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ 1.08 ಕೋಟಿ ರೂ. ಮೌಲ್ಯದ 21 ಸಾವಿರ ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. ಜತೆಗೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ 10 ವಾಹನಗಳನ್ನು ಜಪ್ತಿ ಮಾಡಿದ್ದು, ಒಟ್ಟು 622 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ನಕುಲ್ ತಿಳಿಸಿದರು.
ಡಿಸಿಪಿ ಅಣ್ಣಮಲೈ ಮಾತನಾಡಿ, ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 2,131 ಮತಗಟ್ಟೆಗಳಿದ್ದು, ಆ ಪೈಕಿ 323 ಮತಗಟ್ಟೆಗಳನ್ನು ಸೂಕ್ಷ್ಮ ಹಾಗೂ 80 ಅತೀ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಆ ಹಿನ್ನೆಲೆಯಲ್ಲಿ ಭದ್ರತೆಗಾಗಿ 3 ಪ್ಯಾರಾ ಮಿಲಿಟರಿ ಪಡೆ, 8 ಕೆಎಸ್‌ಆರ್‌ಪಿ ಸೇರಿ 4,741 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.