ಗದಗ: ಮಹಾರಾಷ್ಟ್ರದಿಂದ ಇತ್ತೀಚೆಗೆ ಮುಂಬೈ-ಗದಗ ರೈಲಿನಲ್ಲಿ ನಗರಕ್ಕೆ ಆಗಮಿಸಿದವರಲ್ಲಿ ಮೂವರು ಸೇರಿದಂತೆ ಒಟ್ಟು ನಾಲ್ವರಿಗೆ ಮಂಗಳವಾರ ಕೋವಿಡ್ ಸೋಂಕು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸೋಂಕಿನಿಂದ ಗುಣಮುಖರಾದ ಇಬ್ಬರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜೂ.14ರಂದು ನಗರಕ್ಕೆ ಆಗಮಿಸಿದವರನ್ನು ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದ್ದು, ಅವರಲ್ಲಿ ನಗರದ 26 ವರ್ಷದ ಮಹಿಳೆ (ಪಿ.7386), ಜೂ.15ರಂದು ಆಗಮಿಸಿರುವ 11 ವರ್ಷದ ಬಾಲಕಿ (ಪಿ.7387) ಹಾಗೂ 3 ವರ್ಷದ ಮಗುವಿಗೆ (ಪಿ.7388) ಸೋಂಕು ದೃಢಪಟ್ಟಿದೆ. ಆದರೆ, ಸೋಂಕಿತ ಮಕ್ಕಳ ಪಾಲಕರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೊಳಪಡಿಸಿದ್ದು, ವರದಿ ನೆಗೆಟಿವ್ ಬಂದಿದೆ ಎನ್ನಲಾಗಿದೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಗದಗ ತಾಲೂಕಿನ ಕೋಟುಮಚಗಿ ಗ್ರಾಮದ ವ್ಯಕ್ತಿಯೊಬ್ಬರಿಗೆ(ಪಿ.7389) ಕೋವಿಡ್ ದೃಢಪಟ್ಟಿದೆ. ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಲು ಸೂಚಿಸಲಾಗಿತ್ತು. ಅದರಂತೆ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದು, ಅವರ ಗಂಟಲು ಮಾದರಿ ಸಂಗ್ರಹಿಸಿ, ಪರೀಕ್ಷೆಗೊಳಪಡಿಸಿದಾಗ ಸೋಂಕು ಇರುವುದು ಖಚಿತವಾಗಿದೆ. ಹೀಗಾಗಿ ಸೋಂಕಿತರೊಂದಿಗೆ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕದಲ್ಲಿರುವವರನ್ನು ಪತ್ತೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಧಿಕಾರಿ ಎಂ.ಜಿ.ಹಿರೇಮಠ ಮಾಹಿತಿ ನೀಡಿದ್ದಾರೆ.
ಇಬ್ಬರು ಗುಣಮುಖ: ಕೋವಿಡ್ ಸೋಂಕಿನಿಂದ ಇಲ್ಲಿನ ನಿಗದಿತ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 59 ವರ್ಷದ ವೃದ್ಧ(ಪಿ-5383) ಮತ್ತು 49 ವರ್ಷದ ಮಹಿಳೆ (ಪಿ-5384) ಸೋಂಕಿನಿಂದ ಸಂಪೂರ್ಣ ಗುಣಮುಖರಾದ ಹಿನ್ನೆಲೆಯಲ್ಲಿ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು. ಮಹಾರಾಷ್ಟ್ರದಿಂದ ಹಿಂದಿರುಗಿದ್ದ ಈ ಇಬ್ಬರಿಗೂ ಜೂ.6 ರಂದು ಕೊರೊನಾ ಕಂಡು ಬಂದಿದ್ದು, ಇಲ್ಲಿನ ಕೋವಿಡ್ ಆಸ್ಪತ್ರೆಯಲ್ಲಿ ನೀಡಿದ ಚಿಕಿತ್ಸೆಯಿಂದಾಗಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಗುಣಮುಖರಾಗಿ ಮಂಗಳವಾರ ಆಸ್ಪತ್ರೆಯಿಂದ ಹೊರ ಬರುತ್ತಿದ್ದಂತೆ ಜಿಮ್ಸ್ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿ ಚಪ್ಪಾಳೆ ತಟ್ಟಿ, ಶುಭ ಕೋರಿದರು. ಅಲ್ಲದೇ ಮುಂದಿನ ಎರಡು ವಾರ ಅನಗತ್ಯವಾಗಿ ಮನೆಯಿಂದ ಹೊರ ಬರಬಾರದು ಎಂದು ವೈದ್ಯರು ಸೂಚಿಸಿ, ಬೀಳ್ಕೊಟ್ಟರು.