ಪಣಜಿ: ಮುಂದಿನ ನಾಲ್ಕು ದಿನಗಳ ಕಾಲ ಗೋವಾದ ಉತ್ತರ ಮತ್ತು ದಕ್ಷಿಣ ಈ ಎರಡೂ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 01, 04 ರಂದು ಉತ್ತರ ಮತ್ತು ದಕ್ಷಿಣ ಗೋವಾದಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಮತ್ತು ಜೂನ್ 2 ರಂದು ಎರಡೂ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮಹಾರಾಷ್ಟ್ರ-ಗೋವಾ ಗಡಿ ಭಾಗದ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 75 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಭಾಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಜೂನ್ 1 ರಂದು ಬೆಳಿಗ್ಗೆ ದಕ್ಷಿಣ ಗೋವಾದ ವಿವಿಧ ಸ್ಥಳಗಳಲ್ಲಿ ಗಾಳಿ ಸಹಿತ ಮಳೆಯಾಗಿದೆ. ಮುಂಜಾನೆ ಧಾರಾಕಾರವಾಗಿ ಸುರಿದಿದ್ದರಿಂದ ವಾತಾವರಣ ತಂಪಾಗುವಂತಾಗಿದೆ. ಮಳೆ, ಗಾಳಿಗೆ ಕೆಲವೆಡೆ ಮನೆಯ ಮೇಲೆ ಮರ ಬಿದ್ದು ಹಾನಿ ಸಂಭವಿಸಿರುವುದಾಗಿ ವರದಿಯಾಗಿದೆ. ಕೆಲವೆಡೆ ಹೆದ್ದಾರಿಯ ಮೇಲೂ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗುವಂತಾಗಿತ್ತು.