ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ಸರ್ಕಾರಿ ನೌಕರರು, ಖಾಸಗಿ ವ್ಯಕ್ತಿಗಳಿಗೆ ವಂಚಿಸುತ್ತಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಮೂಲದ ರಘುನಾಥ (38) ಬಂಧಿತ. ಆರೋಪಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ, ವರ್ಗಾವಣೆ ಮಾಡಿಸಿಕೊಡುವುದಾಗಿ ಹಣ ಪಡೆದು ವಂಚಿಸುತ್ತಿದ್ದ. ಈ ಸಂಬಂಧ ದಾಖಲಾದ ಎರಡು ಪ್ರತ್ಯೇಕ ದೂರಿನ ಮೇರೆಗೆ 2 ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿ ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಚಳ್ಳಕೆರೆ ಉಪ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎನ್.ಕಾವ್ಯಾಗೆ ಕರೆ ಮಾಡಿ, ತಾನು ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸಹಾಯಕ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ಬೇರೆಡೆ ವರ್ಗಾವಣೆ ಮಾಡಿಸಿ ಕೊಡಲು 2 ಲಕ್ಷ ರೂ.ಗೆ ಬೇಡಿಕೆ ಇರಿಸಿದ್ದ. ಅದಕ್ಕಾಗಿ ಮುಂಗಡವಾಗಿ ಕಾವ್ಯಾ ಅವರಿಂದ 80 ಸಾವಿರ ರೂ. ಪಡೆದು ವಂಚಿಸಿದ್ದ. ಈ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿಶೇಷ ಕರ್ತವ್ಯಾಧಿಕಾರಿ ಡಾ.ನಾಗರಾಜ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಡಿಸಿಎಂ ಆಪ್ತ ಕಾರ್ಯದರ್ಶಿಯಿಂದ ದೂರು: ಮತ್ತೂಂದು ಪ್ರಕರಣದಲ್ಲಿವಿಧಾನಸೌಧದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು, ಅವರ ಆಪ್ತಕಾರ್ಯದರ್ಶಿಗಳಿಗೆ ಆಪ್ತನಾಗಿದ್ದೇನೆ ಎಂದು ಸರ್ಕಾರಿ ಅಧಿಕಾರಿಗಳಿಗೆ ಆರೋಪಿ ಪರಿಚಯಿಸಿಕೊಳ್ಳುತ್ತಿದ್ದ. ಬಳಿಕ ವರ್ಗಾವಣೆ ಮಾಡಿಸಿಕೊಡುವುದಾಗಿ ಭರವಸೆ ನೀಡುತ್ತಿದ್ದ. ಅದಕ್ಕೆ ಇಂತಿಷ್ಟು ಹಣ ಖರ್ಚಾಗಲಿದೆ ಎಂದು ಸುಳ್ಳು ಹೇಳಿದ್ದ. ಆದರೆ, ಯಾರು ಆರೋಪಿಯನ್ನು ನಂಬಿರಲಿಲ್ಲ. ಈ ವಿಚಾರ ತಿಳಿದ ಡಿಸಿಎಂ ಅವರ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಎಂಬವರು ದೂರು ನೀಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.
ಈ ಹಿಂದೆಯೂ ಬಂಧನ: ಆರೋಪಿ ರಘುನಾಥ್, ಎಂಬಿಎ ವ್ಯಾಸಂಗ ಪದವಿಧರನಾಗಿದ್ದಾನೆ. ಆದರೆ, ಎಲ್ಲಿಯೂ ಕೆಲಸಕ್ಕೆ ಹೋಗದೆ ಅಲೆಯುತ್ತಿದ್ದಾನೆ. ಈ ಮಧ್ಯೆ ಸರ್ಕಾರಿ ಕಚೇರಿಗಳಿಗೆ ತೆರಳಿ ಅಲ್ಲಿನ ಅಧಿಕಾರಿಗಳ ವರ್ಗಾವಣೆಯಾಗುವ ಬಗ್ಗೆ ತಿಳಿದುಕೊಳ್ಳುತ್ತಿದ್ದ. ಅವರ ಮೊಬೈಲ್ ನಂಬರ್ ಸಂಗ್ರಹಿಸಿಕೊಂಡು ಕರೆ ಮಾಡಿ, ಸಚಿವರ ಆಪ್ತ ಕಾರ್ಯದರ್ಶಿ ಎಂದು ಹೇಳಕೊಂಡು ಪರಿಚಯಿಸಿಕೊಳ್ಳುತ್ತಿದ್ದ. ವರ್ಗಾವಣೆ ಹೆಸರಿನಲ್ಲಿ ಹಣ ಪಡೆದುವಂಚಿಸುತ್ತಿದ್ದ.
ಇದೇ ರೀತಿ ವಂಚನೆ ಮಾಡಿದ ಪ್ರಕರಣದಲ್ಲಿ ಕೆಲ ತಿಂಗಳ ಹಿಂದಷ್ಟೇ ಆರೋಪಿಯನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ ಅದೇ ಮಾದರಿಯಲ್ಲಿ ಕೃತ್ಯ ಎಸಗಿದ್ದಾನೆ. ಈತ ಖಾಸಗಿ ವ್ಯಕ್ತಿಗಳಿಗೆ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ವಂಚಿಸುತ್ತಿದ್ದ ಎಂಬುದು ಗೊತಾ ¤ಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.