ಬೆಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ವು ಜೂನ್ 25ರಿಂದ ಜುಲೈ 4ರವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ನಿಗದಿತ ಅವಧಿಯಲ್ಲಿ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಅಲ್ಲದೆ, ಜೂನ್ 18ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪರೀಕ್ಷೆ ಇದ್ದು, ಅಂದು ಕೂಡ ಪ್ರವೇಶ ಪತ್ರದೊಂದಿಗೆ ಉಚಿತವಾಗಿ ಪ್ರಯಾಣಿಸಲು ಕ್ರಮ ಕೈಗೊಳ್ಳಲಾಗಿದೆ.
ಇನ್ನು ಪ್ರವೇಶ ಪತ್ರದ ಆಧಾರದ ಮೇಲೆ ಬಸ್ ಕಾರ್ಯಾಚರಣೆ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಹತ್ತುವವರಿದ್ದರೆ ಹಾಗೂ ಕಾರ್ಯಾಚರಣೆ ಮಾಡುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದರೆ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೋರಿಕೆ ನಿಲುಗಡೆಗೂ ವ್ಯವಸ್ಥೆ ಮಾಡಲಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ತಿಳಿಸಿದ್ದಾರೆ.ಚಾಲನಾ ಸಿಬ್ಬಂದಿ ಈ ನಿದೇರ್ಶನಗಳನ್ನು ತಪ್ಪದೆ ಪಾಲಿಸಬೇಕು ಎಂದೂ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.