ಬೆಂಗಳೂರು: ರಾಜ್ಯದಲ್ಲಿ ಟೈಪ್-1 ಡಯಾಬಿಟಿಸ್‌ನಿಂದ ಬಳಲುತ್ತಿರುವ 18 ವರ್ಷದೊಳಗಿನ 1,884 ಮಕ್ಕಳನ್ನು ಪತ್ತೆ ಮಾಡಲಾಗಿದ್ದು, ಇವರಿಗೆ ಅಗತ್ಯ ಚಿಕಿತ್ಸೆಯನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್ ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಕೆ .ಎಸ್. ನವೀನ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಲ್ಲಿ ಸರಕಾರಿ ಹಾಗೂ ಅನುದಾನಿತ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ 18 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ.
ಕೋವಿಡ್-19 ಹಿನ್ನೆಲೆಯಲ್ಲಿ 2021-22ನೇ ಸಾಲಿನಲ್ಲಿ ಆರೋಗ್ಯ ನಂದನ ಎಂಬ ವಿಶೇಷ ತಪಾಸಣೆ ಅಭಿಯಾನ ನಡೆಸಲಾಗಿದ್ದು, ಒಟ್ಟು 78.32 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಗಿದ್ದು, 1,884 ಮಕ್ಕಳಲ್ಲಿ ಟೈಪ್-1 ಡಯಾಬಿಟಿಸ್‌ನಿಂದ ಬಳಲುತ್ತಿರುವುದು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ:ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಪರಿಶೀಲನೆಗೆ ತಜ್ಞರ ಸಮಿತಿ: ಬಿ.ಸಿ. ನಾಗೇಶ್
ಈ ಸಮಸ್ಯೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಇನ್ಸುಲಿನ್ ಸೇರಿದಂತೆ ಅಗತ್ಯ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ.
ಜಿಲ್ಲಾ, ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಪಾಸಣೆಗೆ ಲ್ಯಾಬ್ ವ್ಯವಸ್ಥೆ ಮಾಡಲಾಗಿದೆ. ಚಿಕಿತ್ಸೆಯನ್ನು ಸಂಪೂರ್ಣವಾಗಿ ಉಚಿತವಾಗಿ ಕೊಡಲಾಗುವುದು ಎಂದು ಸಚಿವರು ತಿಳಿಸಿದರು.