ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೆ.ಆರ್.ಕ್ಷೇತ್ರದಿಂದ ಟಿಕೆಟ್ ನೀಡುವ ವಿಷಯದಲ್ಲಿ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುವುದಾಗಿ ಮಾಜಿ ಸಚಿವ ಎಸ್.ಎ.ರಾಮದಾಸ್ ತಿಳಿಸಿದರು.
ತಾವು ಪಕ್ಷ ಹಾಗೂ ಕ್ಷೇತ್ರದ ಜನರೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಅಧಿಕಾರದಲ್ಲಿರಲಿ ಅಥವಾ ಇಲ್ಲದಿರಲಿ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಈ ಹಿಂದೆ 1994ರಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ರನ್ನು ಕೆ.ಆರ್.ಕ್ಷೇತ್ರದ ಅಭ್ಯರ್ಥಿ ಎನ್ನಲಾಗಿತ್ತಾದರೂ ಪಕ್ಷ ತಮಗೆ ಟಿಕೆಟ್ ನೀಡಿತು.
ಹೀಗಾಗಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡುವ ಸಂಬಂಧ ಪಕ್ಷ ಯಾವುದೇ ತೀರ್ಮಾನ ಕೈಗೊಂಡರೂ, ಯಾರನ್ನೇ ಅಭ್ಯರ್ಥಿ ಯನ್ನಾಗಿಸಿದರು ಅದಕ್ಕೆ ಬದ್ಧನಾಗಿರುತ್ತೇನೆ. ಅಲ್ಲದೆ ಅಭ್ಯರ್ಥಿ ಪರ ಮತಯಾಚನೆ ಮಾಡುತ್ತೇನೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ ಪ್ಲಾಸ್ಟಿಕ್ ಮುಕ್ತ, ಪ್ಲೆಕ್ಸ್ ಮುಕ್ತ ನಗರ, ಶೂನ್ಯ ಘನತ್ಯಾಜ್ಯ ನಿರ್ವಹಣೆ, ಪೌರ ಕಾರ್ಮಿಕರಿಗೆ ಆರೋಗ್ಯ ಸೌಲಭ್ಯ ಮತ್ತು ಒಳಚರಂಡಿ ವ್ಯವಸ್ಥೆ ಜಾರಿಗೊಳಿಸಿತ್ತು. ಇದರ ಪರಿಣಾಮವಾಗಿ ಕಳೆದೆರಡು ಬಾರಿ ಮೈಸೂರು ದೇಶದ ನಂಬರ್ ಒನ್ ಸ್ವತ್ಛ ನಗರ ಎಂಬ ಖ್ಯಾತಿ ಪಡೆದಿತ್ತು.
ಆದರೆ ಈ ಬಾರಿ ಸ್ಪರ್ಧಿಗಳು ಹೆಚ್ಚಿದ್ದು, ಈ ಮೊದಲು ನಾವು ಅಳವಡಿಸಿಕೊಂಡಿದ್ದ ಎಲ್ಲಾ ಸೌಲಭ್ಯವನ್ನು ಅವರೂ ಅಳವಡಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಈ ಬಾರಿ ಪ್ರಶಸ್ತಿ ಬೇರೆಯವರ ಪಾಲಾಗಿದ್ದು, ಈ ಬಗ್ಗೆ ಎಚ್ಚರವಹಿಸಿ, ಮುಂದಿನ ದಿನಗಳಲ್ಲಿ ಮತ್ತಷ್ಟು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕಿದೆ ಎಂದರು.