ಕಾರವಾರ: ಪೌರ ಕಾರ್ಮಿಮಿಕರನ್ನು ಕಾಯಂ ಮಾಡಬೇಕೆಂದು ಒತ್ತಾಯಿಸಿ ಪೌರಕಾರ್ಮಿಕರು ಇಲ್ಲಿನ ನಗರಸಭೆ ಆವರಣದಲ್ಲಿ ಧರಣಿ ಮುಂದುವರಿಸಿದ್ದಾರೆ.
ಧರಣಿ ಮೂರು ದಿನ ಪೂರೈಸಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ನಗರಸಭೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡುವುದನ್ನು ನಿಲ್ಲಿಸಿ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿ ವತಿಯಿಂದ ಶುಕ್ರವಾರದಿಂದಲೇ ಧರಣಿ ಆರಂಭಿಸಿದ್ದು, ಧರಣಿ ಮುಂದುವರಿದಿದೆ.
ಕಾರವಾರ ನಗರಸಭೆ ಮುಂಭಾಗದಲ್ಲಿ ರವಿವಾರವೂ ಮಹಿಳೆಯರೂ ಸೇರಿದಂತೆ 50 ಕ್ಕೂ ಹೆಚ್ಚು ಪೌರಕಾರ್ಮಿರು ಧರಣಿ ಮುಂದುವರಿಸಿದರು. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ತಿಂಗಳಿಗೆ ಕನಿಷ್ಠ 30 ಸಾವಿರ ವೇತನ ನೀಡಬೇಕು. ಇಲ್ಲದಿದ್ದರೆ, ಕೆಲಸ ಮಾಡುವುದನ್ನು ನಿಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತಾ ಕೆಲಸವನ್ನು ಹೊರಗುತ್ತಿಗೆಗೆ ನೀಡಲಾಗುತ್ತಿದೆ. ಕಾರ್ಮಿಕರು ಗುತ್ತಿಗೆದಾರರಿಂದ ಶೋಷಣೆಗೆ ಒಳಗಾಗಿದ್ದು ಈ ಪದ್ಧತಿ ರದ್ದುಪಡಿಸಿ ಎಲ್ಲಾ ಕಾರ್ಮಿಕರನ್ನು ಕಾಯಂ ಮಾಡಬೇಕು ಎಂದು ಮತ್ತೆ ಆಗ್ರಹಿಸಿದರು.
ಹೆಚ್ಚಿನ ಸಂಖ್ಯೆಯಲ್ಲಿರುವ ಮಹಿಳಾ ಪೌರಕಾರ್ಮಿಕರಿಗೆ ಶೌಚಾಲಯ, ಕುಡಿಯುವ ನೀರು, ಹೆರಿಗೆ ಭತ್ಯೆ, ಹೆರಿಗೆ ರಜೆ, ಬಾಲವಾಡಿ, ವಿಶ್ರಾಂತಿ ಗೃಹದಂತಹ ಅತ್ಯವಶ್ಯಕ ಮೂಲಭೂತ ಸೌಲಭ್ಯಗಳನ್ನು ಕಡ್ಡಾಯವಾಗಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಪೌರಕಾರ್ಮಿಕರಿಗಾಗಿ ಜಾರಿ ಮಾಡಿರುವ ಗೃಹ ಭಾಗ್ಯ ಯೋಜನೆಯನ್ನು ಕೇವಲ ಕಾಯಂ ಪೌರಕಾರ್ಮಿಕರಿಗೆ ಸೀಮಿತ ಮಾಡಿ ಶೇ.85 ರಷ್ಟು ಸ್ವಚ್ಛತಾ ಕಾರ್ಮಿಕರಿಗೆ ತಾರತಮ್ಯ ಮಾಡಲಾಗಿದೆ. ಆದ್ದರಿಂದ ಎಲ್ಲಾ ಸ್ವಚ್ಛತಾ ಕಾರ್ಮಿಕರನ್ನೂ ಈ ಯೋಜನೆಯಲ್ಲಿ ಸೇರ್ಪಡಿಸುವಂತೆ ಧರಣಿ ನಿರತ ಗುತ್ತಿಗೆ ಆಧಾರಿತ ಪೌರಕಾರ್ಮಿಕರು ಸರ್ಕಾರವನ್ನು ಒತ್ತಾಯಿಸಿದರು.