Advertisement

Jog ಜಲಪಾತ ಅಭಿವೃದ್ಧಿಗೆ ನಯಾಪೈಸೆ ಬಿಡುಗಡೆ ಆಗಿರಲಿಲ್ಲ; ಬೇಳೂರು ಟಾಂಗ್

07:22 PM Apr 06, 2024 | Team Udayavani |

ಸಾಗರ: ಜೋಗ ಜಲಪಾತ ಅಭಿವೃದ್ಧಿಗೆ ೧೮೦ ಕೋಟಿ ರೂ. ಬಿಡುಗಡೆ ಮಾಡಿದ್ದಾಗಿ ಸಂಸದ ಬಿ.ವೈ.ರಾಘವೇಂದ್ರ ಸುಳ್ಳು ಹೇಳಿದ್ದಾರೆ. ಈ ಕುರಿತು ಆದೇಶ ಆಗಿತ್ತೇ ವಿನಾ ನಯಾಪೈಸೆ ಬಿಡುಗಡೆ ಆಗಿರಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ 20 ಕೋಟಿ ರೂ. ಮೊದಲ ಕಂತು ಬಿಡುಗಡೆಯಾಗಿದ್ದು, ಇನ್ನು 70 ಕೋಟಿ ರೂ. ಸದ್ಯದಲ್ಲಿಯೆ ಬಿಡುಗಡೆಯಗಲಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

Advertisement

ಇಲ್ಲಿನ ಗಾಂಧಿ ಮಂದಿರದಲ್ಲಿ ಶನಿವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿ.ವೈ.ರಾಘವೇಂದ್ರ ಮತ್ತು ಹರತಾಳು ಹಾಲಪ್ಪ ಕಾಮಗಾರಿಗಳಿಗೆ ಆದೇಶ ಪಡೆದಿದ್ದರೇ ವಿನಾ ಯಾವುದಕ್ಕೂ ಹಣ ಬಿಡುಗಡೆ ಮಾಡಿಸಿರಲಿಲ್ಲ ಎಂದರು.

ಹಿಂದಿನ ಸರ್ಕಾರ ಜನಪರವಾಗಿ ಕೆಲಸ ಮಾಡಿಲ್ಲ. ಜನಪರ ಕೆಲಸ ಮಾಡುವ ಜೊತೆಗೆ ಅಭಿವೃದ್ಧಿ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಜನರ ಆಶೋತ್ತರಗಳಿಗೆ ಪೂರಕವಾಗಿ ಕ್ಷೇತ್ರದಾದ್ಯಂತ ಅಭಿವೃದ್ಧಿ ಕೆಲಸಗಳು ನಡೆಯುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಸಹ ನಮ್ಮ ಅಭ್ಯರ್ಥಿ ಗೀತಾ ಶಿವರಾಜ ಕುಮಾರ್ ಅವರಿಗೆ ನಮ್ಮ ಕ್ಷೇತ್ರವ್ಯಾಪ್ತಿಯಲ್ಲಿ ಅತಿಹೆಚ್ಚು ಮತ ಕೊಡಿಸುವ ಹೊಣೆಗಾರಿಕೆ ನಮ್ಮದಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರ ಮನೆಮನಸ್ಸಿಗೆ ತಲುಪಿದೆ. ನಮ್ಮ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಹೇಳಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಬಿ.ಆರ್.ಜಯಂತ್ ಮಾತನಾಡಿ, ಗೀತಾ ಶಿವರಾಜಕುಮಾರ್ ನಮ್ಮ ಅಭ್ಯರ್ಥಿ. ಆದರೆ ನಾವೇ ಸ್ಪರ್ಧೆ ಮಾಡಿದ್ದೇವೆ ಎನ್ನುವ ರೀತಿಯಲ್ಲಿ ಪ್ರತಿಯೊಬ್ಬರೂ ಕೆಲಸ ಮಾಡಬೇಕು. ರಾಜ್ಯ ಸರ್ಕಾರ ಮಹಿಳೆಯರು, ರೈತರು, ಬಡವರಿಗೆ ನೀಡಿರುವ ಯೋಜನೆಗಳು ಯಾವ ಸರ್ಕಾರವೂ ನೀಡಿರಲಿಲ್ಲ. ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸುವುದಕ್ಕಿಂತ ಸಂವಿಧಾನ ಬದಲಾವಣೆ ಮಾಡುವತ್ತ ಹೆಚ್ಚು ಆಸಕ್ತಿ ಹೊಂದಿದೆ. ಇಂತಹ ಹೊತ್ತಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಪ್ರಜಾಪ್ರಭುತ್ವದ ಮೌಲ್ಯ ಉಳಿಯಬೇಕಾದರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ಅತ್ಯಗತ್ಯವಾಗಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ನಗರ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಉಷಾ ಎನ್. ಮಾತನಾಡಿದರು. ವೇದಿಕೆಯಲ್ಲಿ ಎಚ್.ಎಂ.ರವಿಕುಮಾರ್, ಐ.ಎನ್.ಸುರೇಶಬಾಬು, ಕೆ.ಹೊಳೆಯಪ್ಪ, ತಸ್ರೀಫ್, ಸರಸ್ವತಿ ನಾಗರಾಜ್, ಗಣಪತಿ ಮಂಡಗಳಲೆ, ಲಲಿತಮ್ಮ, ಮಹಾಬಲ ಕೌತಿ, ಮೈಕೆಲ್ ಡಿಸೋಜ ಇನ್ನಿತರರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next