ಗದಗ: ಡೀಸೆಲ್, ಪೆಟ್ರೋಲ್ ದರ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಮಹಿಳೆಯರು ತೆಂಗಿನಕಾಯಿ ಚಿಪ್ಪು ಪ್ರದರ್ಶಿಸಿ ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ವಾಹನ ಸವಾರರ ಮೇಲೆ ಬರೆ ಎಳೆದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ಜನವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ಜನಸಾಮಾನ್ಯರಿಗೆ ಹೊರೆಯಾದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಲಾಯಿತು.
ಎತ್ತಿನ ಗಾಡಿ ಮೇಲೆ ಬೈಕ್ ಇಟ್ಟು, ಕಾರಿಗೆ ಹಗ್ಗ ಕಟ್ಟಿಕೊಂಡು ಸರ್ಕಲ್ ಸುತ್ತಲೂ ರೌಂಡ್ ಹಾಕಿ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ, ಕಾರ್ಯಕರ್ತರು, ಮುಖಂಡರು ತೆಂಗಿನಕಾಯಿ ಚಿಪ್ಪು ಪ್ರದರ್ಶಿಸಿ, ಬಾಯಿ ಬಡಿದುಕೊಳ್ಳುತ್ತ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರಡಗಿ, ಮುಖಂಡರಾದ ಎಂ.ಎಂ. ಹಿರೇಮಠ, ಎಂ.ಎಸ್. ಕರಿಗೌಡ್ರ, ರಾಘವೇಂದ್ರ ಯಳವತ್ತಿ, ಮಂಜುನಾಥ ಮುಳಗುಂದ, ವಿಜಯಲಕ್ಷ್ಮಿ ಮಾನ್ವಿ ಸೇರಿ ಹಲವರು ಭಾಗಿಯಾಗಿದ್ದರು.