Advertisement

Gadag-ಗುಣಮಟ್ಟದ ಪೌಷ್ಟಿ ಕ ಆಹಾರ ವಿತರಣೆಯಾಗಲಿ-ಜಿಲ್ಲಾಧಿಕಾರಿ ವೈಶಾಲಿ

06:03 PM Nov 21, 2023 | Team Udayavani |

ಗದಗ: ಅಂಗನವಾಡಿ ಕೇಂದ್ರಗಳಲ್ಲಿ ಗುಣಮಟ್ಟದ ಪೌಷ್ಟಿಕ ಆಹಾರ ವಿತರಣೆಯಲ್ಲಿ ಲೋಪದೋಷಗಳಾಗದಂತೆ
ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಹೇಳಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದಿಂದ ಅನುಷ್ಠಾನಗೊಂಡ ವಿವಿಧ ಯೋಜನೆಗಳ ಸೌಲಭ್ಯ ಮಹಿಳೆಯರಿಗೆ ಮತ್ತು ಮಕ್ಕಳಿಗೆ ತಲುಪಿಸುವಲ್ಲಿ ವಿನಾಕಾರಣ ವಿಳಂಬವಾಗಬಾರದು ಎಂದರು.

ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಪೂರೈಕೆ, ಶುದ್ಧ ಕುಡಿಯುವ ನೀರು ಹಾಗೂ ಮೂಲ ಸೌಕರ್ಯ ಇರುವಂತೆ ನೋಡಿಕೊಳ್ಳಬೇಕು. ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳ ಸಮಗ್ರ ಬೆಳವಣಿಗೆಗೆ ಸಮರ್ಪಕ ವಾತಾವರಣ ಕಲ್ಪಿಸುವುದು ಮುಖ್ಯ ಗುರಿಯಾಗಿದ್ದು, ಇದಕ್ಕೆ ಸಂಬಂಧಿತ ಅಧಿ ಕಾರಿಗಳು ಹೆಚ್ಚಿನ ಗಮನ ಹರಿಸಬೇಕು. ಇಲ್ಲದಿದ್ದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.

ಸ್ವಂತ ಕಟ್ಟಡ ಇಲ್ಲದ ಅಂಗನವಾಡಿ ಕೇಂದ್ರಗಳಿಗೆ ಸ್ಥಳೀಯ ಸಂಸ್ಥೆಗಳ ಆಡಳಿತ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ನಿವೇಶನ ಆಯ್ಕೆಗೆ ಕ್ರಮ ವಹಿಸಬೇಕು. ಬಾಲ್ಯ ವಿವಾಹ ಪ್ರಕರಣಗಳು ಕಂಡು ಬಂದಲ್ಲಿ ಪ್ರಕರಣ ದಾಖಲಿಸಲು ವಿಳಂಬ ಮಾಡಬಾರದು. ಬಾಕಿ ಉಳಿದಿರುವ ದೌರ್ಜನ್ಯ ಪ್ರಕರಣಗಳ ಇತ್ಯರ್ಥಕ್ಕೆ ಶೀಘ್ರ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ ಮಾತನಾಡಿ, ಮಹಿಳೆಯ ಮತ್ತು ಮಕ್ಕಳ ದೌರ್ಜನ್ಯ ತಡೆ ಕಾಯ್ದೆಯಡಿ ತಾಲೂಕು ಮಟ್ಟದಲ್ಲಿ ಹಾಗೂ ಗ್ರಾಮ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗಿದ್ದು, ತಾಲೂಕು
ಮಟ್ಟದಲ್ಲಿ 5 ಸಭೆಗಳನ್ನು ಹಾಗೂ ಗ್ರಾಪಂ ಮಟ್ಟದಲ್ಲಿ 104 ಸಭೆಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

Advertisement

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಯೋಜನೆಯಡಿ ಜುಲೈ 1ರಿಂದ ಸೆಪ್ಟೆಂಬರ್‌ 23ರವರೆಗೆ ಒಟ್ಟು 91 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 27 ಪ್ರಕರಣಗಳು ಇತ್ಯರ್ಥಗೊಂಡಿವೆ. 26 ಪ್ರಕರಣಗಳು ನ್ಯಾಯಾಲಯದ ವಿಚಾರಣಾ
ಹಂತದಲ್ಲಿವೆ. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಗ್ರಾಪಂವಾರು ಲಿಂಗಾನುಪಾತ ಮಾಹಿತಿಯನ್ನು ಪಡೆಯಲಾಗುತ್ತಿದ್ದು, ಕಡಿಮೆ ಲಿಂಗಾನುಪಾತ ಇರುವ ಗ್ರಾಪಂಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ 5 ಸಾಂತ್ವನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ, ದಮನಿತ ಮಹಿಳೆಯರಿಗೆ ವಿವಿಧ ತರಬೇತಿ, ಗೃಹಲಕ್ಷ್ಮೀ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಗುರುಪ್ರಸಾದ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಆರ್‌ಸಿಎಚ್‌ ಅಧಿಕಾರಿ ಡಾ| ಬಿ.ಎಂ. ಗೊಜನೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಕ್ಕಳ ರಕ್ಷಣಾಧಿಕಾರಿ ರಾಧಾ ಮಣ್ಣೂರ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next