ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದಿಸಿದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಶಾಸಕ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು. ಇದರಿಂದ ರೇಣುಕಾಚಾರ್ಯ ಅವರಿಗೆ ಮತ್ತೆ ಕಂಟಕ ಎದುರಾದಂತಾಗಿದೆ.
ರೇಣುಕಾಚಾರ್ಯ ವಿರುದ್ಧ ಗುರುಪಾದಯ್ಯ ಮಠದ್ ಎಂಬುವರು 2015ರಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ತನಿಖೆ ಕೈಗೊಂಡಿದ್ದರು. ತನಿಖೆ ಮುಗಿದು ಅಂತಿಮ ವರದಿ ಸಿದ್ಧವಾಗಿದೆ. ತನಿಖಾ ವರದಿ ನ್ಯಾಯಾಲಯಕ್ಕೆ ಸಲ್ಲಿಸಲು ಸಕ್ಷಮ ಪ್ರಾಧಿಕಾರದ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು. ಅದನ್ನು ಪರಿಗಣಿಸಿದ ನ್ಯಾಯಾಲಯ ಅರ್ಜಿ ವಜಾಗೊಳಿಸಿದೆ.