ಬಾಗಲಕೋಟೆ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಚಿಂತನೆ ಸಂದೇಶಗಳನ್ನು ಯುವಜನತೆಗೆ ಪರಿಚಯಿಸುವ ನಿಟ್ಟಿನಲ್ಲಿ ಗಾಂಧೀಜಿಯವರ 150 ಜನ್ಮ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯವಾದದ್ದು ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ|ಕೆ. ರಾಜೇಂದ್ರ ಹೇಳಿದರು.
ನವನಗರದ ಹೊಸ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡ ಗಾಂಧೀಜಿಯವರ ಅಪರೂಪದ ಛಾಯಾಚಿತ್ರ ಪ್ರದರ್ಶನಕ್ಕೆ ಜಿಲ್ಲಾ ಧಿಕಾರಿ ಕ್ಯಾಪ್ಟನ್ ಡಾ| ಕೆ.ರಾಜೇಂದ್ರ ರವಿವಾರ ಚಾಲನೆ ನೀಡಿ ಮಾತನಾಡಿದರು.
ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಸುಳ್ಳೊಳ್ಳಿ ಮಾತನಾಡಿ, ಮಹಾತ್ಮ ಗಾಂಧೀಜಿಯವರ ಅಪರೂಪದ ಛಾಯಾಚಿತ್ರ ಪ್ರದರ್ಶನ ನ. 3ರಿಂದ ಮೂರು ದಿನಗಳ ಕಾಲ ಬೆಳಗ್ಗೆಯಿಂದ ರಾತ್ರಿ 8 ಗಂಟೆವರೆಗೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಲು ತಿಳಿಸಿದರು.
ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತಂದ ಪಾಪು-ಬಾಪು ಕಿರು ಪುಸ್ತಕಗಳನ್ನು ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿತರಿಸಲಾಯಿತು. ಶಾಲಾ ಮಕ್ಕಳಿಗೆ ಸಿಹಿ ಕೂಡಾ ಹಂಚಲಾಯಿತು. ಕಾರ್ಯಕ್ರಮದ ಪೂರ್ವದಲ್ಲಿ ವಿವಿಧ ಶಾಲಾ ಮಕ್ಕಳು ಜಿಲ್ಲಾಧಿಕಾರಿಗಳಿಗೆ ಪುಷ್ಪ ನೀಡಿ ಸ್ವಾಗತಿಸಿದರು. ಜಿಪಂ ಉಪ ಕಾರ್ಯದರ್ಶಿ ಎ.ಜಿ. ತೋಟದ, ಆಹಾರ ಇಲಾಖೆ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ ಅಪರೂಪದ ಛಾಯಾಚಿತ್ರ ಪ್ರದರ್ಶನದಲ್ಲಿ ಗಾಂಧೀಜಿಯವರ ಅಪರೂಪದ ಛಾಯಾಚಿತ್ರ ವೀಕ್ಷಿಸಿದರು.