ಅಕೋಲಾ: ಸಾಮಾಜಿಕ ಜಾಲತಾಣವೊಂದರಲ್ಲಿ ಅಪ್‌ಲೋಡ್ ಆದ ಪೋಸ್ಟ್‌ಗೆ ಸಂಬಂಧಿಸಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು, ಇಬ್ಬರು ಪೊಲೀಸರು ಸೇರಿ 8 ಮಂದಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ಅಕೋಲಾ ನಗರದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಘಟನೆ ಸಂಬಂಧ ಪೊಲೀಸರು ಒಟ್ಟು 26 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ನೀಮಾ ಅರೋರಾ ಆದೇಶ ಹೊರಡಿಸಿದ್ದಾರೆ.
ಆಗಿದ್ದೇನು?: ಒಂದು ಸಮುದಾಯದ ಧಾರ್ಮಿಕ ಭಾವನೆಗಳನ್ನು ಕೆರಳಿಸುವಂಥ ಪೋಸ್ಟೊಂದು ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದರಿಂದ ರೊಚ್ಚಿಗೆದ್ದ ಗುಂಪು ಪ್ರತಿಭಟನೆ ಆರಂಭಿಸಿತ್ತು. ಈ ವೇಳೆ ಎರಡೂ ಸಮುದಾಯಗಳ ಯುವಕರು ಪರಸ್ಪರ ಕಲ್ಲುತೂರಾಟ ಆರಂಭಿಸಿದ್ದಲ್ಲದೇ, ಕೆಲವು ವಾಹನಗಳನ್ನೂ ಪುಡಿಗಟ್ಟಿದರು. ಆಗ ನಡೆದ ಘರ್ಷಣೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು, 8 ಮಂದಿ ಗಾಯಗೊಂಡರು. ಕಲ್ಲು ತೂರಾಟದಿಂದ ಇಬ್ಬರು ಪೊಲೀಸರಿಗೂ ಗಾಯಗಳಾಗಿವೆ ಎಂದು ಹೆಚ್ಚುವರಿ ಎಸ್‌ಪಿ ಮೋನಿಕಾ ರಾವತ್ ಹೇಳಿದ್ದಾರೆ.
ಪರಿಸ್ಥಿತಿ ನಿಯಂತ್ರಣಕ್ಕೆ: ಶನಿವಾರ ರಾತ್ರಿ ಘರ್ಷಣೆ ತೀವ್ರಗೊಂಡ ಕೂಡಲೇ ಪೊಲೀಸರು ಅಶ್ರುವಾಯು ಪ್ರಯೋಗಿಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಸದ್ಯಕ್ಕೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದೂ ರಾವತ್ ಮಾಹಿತಿ ನೀಡಿದ್ದಾರೆ. ಜತೆಗೆ, ಶಾಂತಿ ಕಾಪಾಡುವಂತೆ ಜನರಿಗೆ ಮನವಿ ಮಾಡಿದ್ದಾರೆ.
ನಗರದಲ್ಲಿ ಬಿಗಿಭದ್ರತೆ
ಘಟನೆ ಹಿನ್ನೆಲೆ ನಗರದಾದ್ಯಂತ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಅಕೋಲಾ ನಗರದಲ್ಲಿ ರಾಜ್ಯ ಮೀಸಲು ಪಡೆಯ ಒಂದು ಸಾವಿರ ಸಿಬ್ಬಂದಿಯನ್ನು ಭದ್ರತೆಗೆಂದು ನಿಯೋಜಿಸಲಾಗಿದೆ. ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ನಾಗರಿಕರಿಗೆ ಪೊಲೀಸರು ಸೂಚಿಸಿದ್ದಾರೆ.