ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣಂ ನಲ್ಲಿ ಮತ್ತೊಂದು ಅನಿಲ ದುರಂತ ಸಂಭವಿಸಿದ್ದು, ಇಬ್ಬರು ಮೃತಪಟ್ಟು, ನಾಲ್ವರು ಆಸ್ಪತ್ರೆಗೆ ದಾಖಲಾದ ಘಟನೆ ಕಳೆದ ರಾತ್ರಿ 11.30ರ ಸಮಯದಲ್ಲಿ ನಡೆದಿದೆ.
ವಿಶಾಖಪಟ್ಟಣದಲ್ಲಿರುವ ಸೈನರ್ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಿಂದ ಬೆಂಜಿಮಿಡಾಜೋಲ್ ಎಂಬ ವಿಷಾನಿಲ ಸೋರಿಕೆಯಾಗಿದ್ದು, ಈ ವೇಳೆ ಅಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಾವಿಗೀಡಾಗಿದ್ದಾರೆ. ತೀವ್ರ ಅಸ್ವಸ್ಥರಾದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ವಿಷಾನಿಲ ಸೋರಿಕೆಯಾದ ಸ್ಥಳದಲ್ಲೇ ಇಬ್ಬರು ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರಿಂದ ಅವರು ಮೃತಪಟ್ಟಿದ್ದಾರೆ. ಗ್ಯಾಸ್ ಹೆಚ್ಚಿನ ಪ್ರಮಾಣದಲ್ಲಿ ಹರಡುವುದನ್ನು ತಡೆಹಿಡಿಯಲಾಗಿದೆ ಎಂದು ಪರ್ವಾದ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಉದಯ್ ಕುಮಾರ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಪ್ರಕರಣದ ಕುರಿತು ಮಾಹಿತಿ ಪಡೆದ ಮುಖ್ಯಮಂಯತ್ರಿ ಜಗನ್ ಮೋಹನ್ ರೆಡ್ಡಿ ದುರಂತ ಸಂಭವಿಸಿದ ತಕ್ಷಣ ಕಾರ್ಖಾನೆಯನ್ನು ಮುಚ್ಚಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಮೇ 7 ರಂದು ವಿಶಾಖಪಟ್ಟಣಂನಲ್ಲಿರುವ, ಪಾಲಿಸ್ಟೈರೀನ್ ಉತ್ಪನ್ನಗಳನ್ನು ತಯಾರಿಸುವ ದಕ್ಷಿಣ ಕೊರಿಯಾದ ಒಡೆತನದ ಕಾರ್ಖಾನೆ ಎಲ್ ಜಿ ಪಾಲಿಮರ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಅನಿಲ ಸೋರಿಕೆಯಾಗಿ 12 ಜನರು ಸಾವನ್ನಪ್ಪಿದರು ಮತ್ತು ನೂರಾರು ಜನರು ಅ್ವಸ್ಥರಾಗಿದ್ದರು.