ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬೆಳಗಾವಿ ಮೂಲದ ಭರತ್ ಕುರ್ನೆಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಭರತ್ ಕುರ್ನೆ ಪ್ರಮುಖ ಪಾತ್ರ ವಹಿಸಿದ್ದು, ಆರೋಪಿಗಳು ಉಳಿದುಕೊಳ್ಳಲು ತನ್ನ ತೋಟದ ಮನೆ ಹಾಗೂ ಓಡಾಡಲು ಒಂದು ಕಾರನ್ನು ಕೊಟ್ಟಿದ್ದ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ತಂಡ ಆರೋಪಿಯನ್ನು ಬೆಳಗಾವಿಯಲ್ಲಿ ಬಂಧಿಸಿತ್ತು. ಬಳಿಕ ನ್ಯಾಯಾಲಯದ ಅನುಮತಿ ಪಡೆದು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದು ಪುಣೆ ಹಾಗೂ ಗೋವಾಗೆ ಕರೆದುಕೊಂಡು ಹೋಗಿತ್ತು.
ಗುರುವಾರ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಆರೋಪಿಯನ್ನು ಎಸ್‌ಐಟಿ ಕೋರ್ಟ್ ಹಾಜರು ಪಡಿಸಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಗೌರಿ ಹಂತಕರು ಸಿಐಡಿ ವಶಕ್ಕೆ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೂ ಸಾಹಿತಿ ಡಾ.ಎಂ.ಎಂ.ಕಲಬುರ್ಗಿ ಹತ್ಯೆಗೂ ಸಾಮ್ಯತೆ ಕಂಡು ಬಂದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗಾಗಿ ಎಲ್ಲ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಅಧಿಕಾರಿಗಳು ಸೆಷನ್ಸ್
ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ಮನವಿ ಪುರಸ್ಕರಿಸಿದ ಕೋರ್ಟ್ ಐದು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.
ಗೌರಿ ಹತ್ಯೆ ಆರೋಪಿಗಳಾದ ಮಹರಾಷ್ಟ್ರದ ಅಮೋಲ್ ಕಾಳೆ, ಅಮಿತ್ ದೇಗ್ವೇಕರ್, ಶಿವಮೊಗ್ಗದ ಕಪ್ಪನಹಳ್ಳಿ ಗ್ರಾಮದ ಸುಜೀತ್ ಕುಮಾರ್, ಹುಬ್ಬಳ್ಳಿಯ ಗಣೇಶ್ ಮಿಸ್ಕಿನ್, ವಿಜಯ ಪುರ ಮನೋಹರ್ ಯಡವೆ, ಸಂಪಾಜೆಯ ಮೋಹನ್ ನಾಯಕ್, ರಾಜೇಶ್ ಬಂಗೇರಾ ಕಲ್ಬುರ್ಗಿ ಹತ್ಯೆಯಲ್ಲೂ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಆರೋಪಿಗಳನ್ನು ವಶಕ್ಕೆ ನೀಡುವಂತೆ ಮನವಿ ಮಾಡಿತ್ತು. ಇದನ್ನು ಪುರಸ್ಕರಿಸಿದ ಕೋರ್ಟ್ ಎಲ್ಲ ಆರೋಪಿಗಳನ್ನು ಆ.27ರಿಂದ 31ರವರೆಗೆ ಸಿಐಡಿ ವಶಕ್ಕೆ ಆದೇಶಿಸಿದೆ.