Advertisement

Lok Sabha Election: ಅಡುಗೆ-ಜನಸೇವೆ ಸಮರ್ಥವಾಗಿ ನಿಭಾಯಿಸಬಲ್ಲೆ : ಗಾಯತ್ರಿ

10:14 AM Apr 12, 2024 | Team Udayavani |

ಹೊನ್ನಾಳಿ: ಅಡುಗೆಯನ್ನೂ ಉತ್ತಮವಾಗಿ ಮಾಡುತ್ತೇನೆ, ಜನಸೇವೆಯನ್ನೂ ಸಮರ್ಪಕವಾಗಿ ನಿಭಾಯಿಸಬಲ್ಲೆ. ಆ ಧೈರ್ಯ ಮತ್ತು ಆತ್ಮಶಕ್ತಿ ನನ್ನಲ್ಲಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದರು.

Advertisement

ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳ ಬಿಜೆಪಿ ಮಂಡಲದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣಾ ಕಾರ್ಯಾಲಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಭಾರತದಲ್ಲಿ ಹಿಂದುತ್ವ ಉಳಿಯಬೇಕಾದರೆ ನರೇಂದ್ರ ಮೋದಿಯವರು ಮೂರನೇ ಬಾರಿ
ಪ್ರಧಾನಮಂತ್ರಿಯಾಗಬೇಕು. ನನ್ನನ್ನು ಗೆಲ್ಲಿಸಿದರೆ ನರೇಂದ್ರ ಮೋದಿಯವರಿಗೆ ಕಮಲ ಅರ್ಪಿಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅನುದಾನ ತರುವುದಾಗಿ
ತಿಳಿಸಿದರು.

ಬಿಜೆಪಿ ಭಾರತೀಯ ಸಂಸ್ಕೃತಿ ಮೈಗೂಡಿಸಿಕೊಂಡಿದ್ದರೆ, ಕಾಂಗ್ರೆಸ್‌ ವಿದೇಶಿ ಸಂಸ್ಕೃತಿ ರೂಢಿಸಿಕೊಂಡಿರುವುದು ಜಗಜ್ಜಾಹೀರಾಗಿದೆ. ನಮ್ಮ ಸಂಸ್ಕೃತಿ-ಪರಂಪರೆಯನ್ನು ಉಳಿಸಿಕೊಂಡು ಹೋಗುವುದು ನಮ್ಮ ಕರ್ತವ್ಯ. ಬಿಜೆಪಿ ಕಾರ್ಯಕರ್ತರು ಬೂತ್‌ ಮಟ್ಟದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದರೆ ನಮ್ಮ ಗೆಲುವು ಸುಲಭವಾಗುತ್ತದೆ ಎಂದರು.

ಸಂಸದ ಜಿ.ಎಂ. ಸಿದ್ದೇಶ್ವರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನನ್ನ ತಂದೆ ಮಲ್ಲಿಕಾರ್ಜುನಪ್ಪ ಎರಡು ಬಾರಿ ಸಂಸದರಾಗಿ ಮತ್ತು ನಾನು ನಾಲ್ಕು ಬಾರಿ
ಸಂಸದರಾಗಿ ಜಿಲ್ಲೆಗೆ ಸಾಕಷ್ಟು ಅನುದಾನ ತಂದು ಅಭಿವೃದ್ಧಿ ಮಾಡಿದ್ದೇವೆ. ಪಕ್ಷದ ವರಿಷ್ಠರು ಈ ಬಾರಿ ನನ್ನ ಪತ್ನಿಗೆ ಟಿಕೆಟ್‌ ನೀಡಿದ್ದಾರೆ. ಅವರನ್ನು ಜಯಶೀಲರನ್ನಾಗಿ ಮಾಡಬೇಕು ಎಂದು ಮನವಿ ಮಾಡಿದರು.

ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಜನ ಮೆಚ್ಚುವಂತಹ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಏ. 19ರಂದು ಗಾಯತ್ರಿ ಸಿದ್ದೇಶ್ವರ ಅವರು ನಾಮಪತ್ರ ಸಲ್ಲಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗಮಿಸಲಿದ್ದಾರೆ ಎಂದು ತಿಳಿಸಿದರು.

Advertisement

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ರಾಜ್ಯದಿಂದ ಬಿಜೆಪಿ ಅತಿ ಹೆಚ್ಚಿನ ಸ್ಥಾನ ಗೆಲ್ಲಬೇಕು. ದಾವಣಗೆರೆಯಿಂದ ಗಾಯಿತ್ರಿ ಸಿದ್ದೇಶ್ವರ ಅವರು ಗೆದ್ದು ದಹಲಿಗೆ ಹೋಗಬೇಕು. ಆ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು, ಮುಖಂಡರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗುವುದನ್ನು ಕೇವಲ ಭಾರತವಷ್ಟೇ ಅಲ್ಲ, ಇಡೀ ವಿಶ್ವವೇ ಎದುರು ನೋಡುತ್ತಿದೆ. ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗುವುದು ಕೂಡ ಅಷ್ಟೇ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್‌, ಬಿಜೆಪಿ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಕೆ.ಪಿ. ಕುಬೇಂದ್ರಪ್ಪ, ಪಕ್ಷದ ಜಿಲ್ಲಾಧ್ಯಕ್ಷ ರಾಜಶೇಖರ್‌ ಮಾತನಾಡಿದರು. ತಾಲೂಕು ಮತ್ತು ಜಿಲ್ಲಾಧ್ಯಕ್ಷರ ಗಮನಕ್ಕಿಲ್ಲದೆ ಕೆಲವರು ಪಕ್ಷದ ಪರ ಪ್ರಚಾರ ಮಾಡುತ್ತಿದ್ದಾರೆ. ಅವರ ವಿರುದ್ಧ ತಕ್ಷಣ ಸೂಕ್ತ ಕ್ರಮ
ಕೈಗೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಕೆಲ ಕಾರ್ಯಕರ್ತರು ಒತ್ತಾಯಿಸಿದರು. ಆಗ ಸಭೆಯಲ್ಲಿ ಗೊಂದಲ ಉಂಟಾಗಿತ್ತು. ರೇಣುಕಾಚಾರ್ಯ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಜೆ.ಕೆ. ಸುರೇಶ್‌ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್‌ ಮಾಜಿ ಸಚೇತಕ ಡಾ| ಶಿವಯೋಗಿಸ್ವಾಮಿ, ಮುಖಂಡರಾದ ಧನಂಜಯ, ಅನಿಲ್‌ಕುಮಾರ್‌, ರಾಜನಹಳ್ಳಿ ಶಿವಕುಮಾರ್‌, ಜಯಮ್ಮ, ಸತೀಶ್‌, ನಾಗರಾಜ್‌ ಇತರರು ಉಪಸ್ಥಿತರಿದ್ದರು. ನೆಲಹೊನ್ನೆ ಮಂಜುನಾಥ
ನಿರೂಪಿಸಿದರು.

ಕಿಡಿಗೇಡಿಗಳ ಷಡ್ಯಂತ್ರಕ್ಕೆ ಕಿವಿಗೊಡದಿರಿ: ರೇಣು
ಪಕ್ಷಕ್ಕೆ ಕೆಟ್ಟ ಹೆಸರು ತರಲು ಕೆಲ ಕಿಡಿಗೇಡಿಗಳು ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತ ಪಕ್ಷದಲ್ಲಿದ್ದುಕೊಂಡು ಪಕ್ಷದ ಪರ ಪ್ರಚಾರ ಮಾಡುವ ನಾಟಕವಾಡುತ್ತಿದ್ದಾರೆ. ಮಂಡಲ ಅಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರ ಗಮನಕ್ಕೆ ತರದೆ ಇಂತಹ ಕೆಲಸ ಮಾಡುತ್ತಿದ್ದಾರೆ. ಅದನ್ನು ಯಾರೂ ಗಂಭೀರವಾಗಿ ಪರಿಗಣಿಸಬಾರದು.

ಪ್ರತಿ ಚುನಾವಣೆಯಲ್ಲಿ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಾ ಬಂದಿದ್ದಾರೆ. 2013 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಇಂತಹ ಘಟನೆಗಳು ನಡೆದಿದ್ದು, ನಾನು ಇಂಥವರಿಗೆ ಸೊಪ್ಪು ಹಾಕುವುದಿಲ್ಲ ಎಂದು ರೇಣುಕಾಚಾರ್ಯ ಗುಡುಗಿದರು.

ಇದನ್ನೂ ಓದಿ: LS Polls: ಚಿಕ್ಕೋಡಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಶಂಭು ಸ್ಪರ್ಧೆ

Advertisement

Udayavani is now on Telegram. Click here to join our channel and stay updated with the latest news.

Next