ನವದೆಹಲಿ: ನೂತನ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಜನರಲ್ ಆಗಿ ಗಿರೀಶ್ ಚಂದ್ರ ಮುರ್ಮು ನೇಮಕ ಮಾಡಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಆದೇಶಿಸಿದ್ದಾರೆ.
1985 ಬ್ಯಾಚ್ ಗುಜರಾತ್ ಕೇಡಾರ್ ನ ಐಎಎಸ್ ಅಧಿಕಾರಿಯಾಗಿರುವ ಮುರ್ಮು ಗುಜರಾತ್ ನಲ್ಲಿ ನರೇಂದ್ರ ಮೋದಿ ಸಿಎಂ ಆಗಿದ್ದ ವೇಳೆ ಅವರ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಒಡಿಶಾ ಮೂಲದವರಾದ ಇವರು ಪ್ರಸ್ತುತ ಭಾರತ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯ ಕಾರ್ಯದರ್ಶಿಯಾಗಿದ್ದರೆ. ಬರ್ಮಿಂಗ್ ಹ್ಯಾಮ್ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿದ್ದಾರೆ. ನರೇಂದ್ರ ಮೋದಿ ಅವರಿಗೆ ಹೆಚ್ಚು ಆಪ್ತರಾಗಿದ್ದಾರೆ.
ಇನ್ನು ಮತ್ತೊಂದು ಕೇಂದ್ರಾಡಳಿತ ಪ್ರದೇಶವಾದ ಲಡಾಖ್ಗೆ ರಾಧಾಕೃಷ್ಣ ಮಥುರ್ ಅವರನ್ನು ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ತ್ರಿಪುರಾ ಕೇಡರ್‌ನ 1977ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಆರ್‌ಕೆ ಮಾಥೂರ್, 2018ರ ನವೆಂಬರ್‌ನಲ್ಲಿ ಮುಖ್ಯ ಮಾಹಿತಿ ಆಯುಕ್ತರಾಗಿ ನಿವೃತ್ತರಾಗಿದ್ದಾರೆ. 2013ರ ಮೇ ನಿಂದ ಎರಡು ವರ್ಷ ಅವರು ಭಾರತೀಯ ರಕ್ಷಣಾ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು. ಹಾಗೆಯೇ ರಕ್ಷಣಾ ಉತ್ಪಾದನಾ ಕಾರ್ಯದರ್ಶಿ, ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಕಾರ್ಯದರ್ಶಿ ಹಾಗೂ ತ್ರಿಪುರಾದ ಮುಖ್ಯ ಕಾರ್ಯದರ್ಶಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. ಐಐಟಿ ಕಾನ್ಪುರದಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್,, ಐಐಟಿ ದೆಹಲಿಯಲ್ಲಿ ಇಂಡಸ್ಟ್ರಿಯಲ್ ಎಂಜಿನಿಯರಿಂಗ್ ಜತೆಗೆ ಸ್ಲೊವೇನಿಯಾದಲ್ಲಿ ಎಂಬಿಎ ಪದವಿ ಪಡೆದಿದ್ದಾರೆ.
ಇನ್ನು ಇಲ್ಲಿಯವರೆಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಸತ್ಯಪಾಲ್ ಮಲ್ಲಿಕ್ ಅವರನ್ನು ಗೋವಾ ರಾಜ್ಯಪಾಲರಾಗಿ ನೇಮಿಸಲಾಗಿದೆ,
ಜಮ್ಮು ಕಾಶ್ಮೀರ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ವಿಧಿ 370ನ್ನು ರದ್ದು ಮಾಡಿ, ಆಗಸ್ಟ್ 5ರಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವಾಗಿ ಸರ್ಕಾರ ಘೋಷಿಸಿತ್ತು. ಅಕ್ಟೋಬರ್ 31 ರಂದು ಎರಡು ಕೇಂದ್ರಾಡಳಿತ ಪ್ರದೇಶಗಳು ಅಸ್ತಿತ್ವಕ್ಕೆ ಬರಲಿವೆ ಮತ್ತು ಅಂದೇ ಈ ಅಧಿಕಾರಿಗಳು ಲೆಫ್ಟಿನೆಂಟ್ ಗವರ್ನರ್ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.