Advertisement

ದಸರಾಗೆ ಪೊಲೀಸರಿಗೆ ಉಡುಗೊರೆ

11:25 PM Sep 09, 2019 | Lakshmi GovindaRaju |

ಬೆಂಗಳೂರು: ನಾಡಹಬ್ಬ ದಸರಾ ಹೊತ್ತಿಗೆ ರಾಜ್ಯ ಪೊಲೀಸರಿಗೆ ವೇತನ ಹೆಚ್ಚಳದ ಉಡುಗೊರೆ ಸಿಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಔರಾದ್ಕರ್‌ ಸಮಿತಿ ವರದಿಯನ್ನು ಮುಂದಿನ ತಿಂಗಳು ಅನುಷ್ಠಾಗೊಳಿಸಲಾಗುವುದು. ಇದರಲ್ಲಿ ಯಾವುದೇ ಗೊಂದಲವಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ನಾಡಹಬ್ಬದ ವೇಳೆಗೆ ಪೊಲೀಸರಿಗೆ ಶುಭ ಸುದ್ದಿ ಸಿಗಲಿದೆ ಎಂದು ಹೇಳಿದರು.

Advertisement

ಔರಾದ್ಕರ್‌ ವರದಿಯಂತೆ ಪೇದೆಯಿಂದ ಡಿವೈಎಸ್‌ಪಿವರೆಗೆ ವೇತನ ಪರಿಷ್ಕರಣೆಯಾಗಲಿದೆ. ಜತೆಗೆ ಕಾರಾಗೃಹ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧವೂ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಪಂ ಸದಸ್ಯರಾಗಿದ್ದ ಯೋಗೇಶ್‌ಗೌಡ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಲು ತೀರ್ಮಾನಿಸಲಾಗಿದ್ದು, ಮುಂದಿನ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಗುಂಡಿ ದುರಸ್ತಿಗೆ ಒತ್ತು: ಮುಖ್ಯಮಂತ್ರಿಗಳು ಭಾನುವಾರ ನಗರ ಪ್ರದಕ್ಷಿಣೆ ನಡೆಸಿದ ಸಂದರ್ಭದಲ್ಲಿ ರಸ್ತೆ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ಸೂಚಿಸಿದ್ದಾರೆ. ಅದರಂತೆ ಪಾಲಿಕೆಯು ಗುಂಡಿ ಮುಚ್ಚುವ ಕಾರ್ಯವನ್ನು ವ್ಯಾಪಕವಾಗಿ ಕೈಗೊಳ್ಳಲಿದೆ ಎಂದು ಹೇಳಿದರು.

ಸಂಚಾರ ನಿಯಮ ಉಲ್ಲಂಘನೆಗೆ ದುಬಾರಿ: ದಂಡ ವಿಧಿಸುತ್ತಿರುವುದಕ್ಕೆ ಸಾರ್ವಜನಿಕರಿಂದ ಪ್ರತಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಸಂಚಾರ ನಿಯಮ ಉಲ್ಲಂಘನೆಗೆ ದಂಡ ವಿಧಿಸುವ ಸಂಬಂಧ ಕೇಂದ್ರ ಸರ್ಕಾರ ನಿಯಮ ರೂಪಿಸಿದೆ. ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲೇ ಪ್ರಸ್ತಾವ ಸಲ್ಲಿಕೆಯಾಗಿತ್ತು. ನಂತರ ಜಂಟಿ ಸಮಿತಿಗೆ ಪ್ರಸ್ತಾವ ರವಾನೆಯಾಗಿ ಎಲ್ಲ ಪಕ್ಷಗಳೂ ಸೇರಿ ಸಂಸತ್‌ನಲ್ಲಿ ವಿಧೇಯಕಕ್ಕೆ ಅಂಗೀಕಾರ ನೀಡಿವೆ ಎಂದು ಸಮರ್ಥನೆ ನೀಡಿದರು. ಕೇಂದ್ರ ಸರ್ಕಾರಕ್ಕೆ ರಾಜ್ಯದ ಜನರ ಭಾವನೆ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.

“ಗೋ ಹತ್ಯೆ ನಿಲ್ಲಿಸುತ್ತೇವೆ’
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ ತಿಂಗಳು ಕಳೆದ ಬೆನ್ನಲ್ಲೇ ಗೋಹತ್ಯೆ ನಿಷೇಧ ವಿಚಾರ ಚರ್ಚೆ ಮುನ್ನಲೆಗೆ ಬಂದಿದೆ. ಈ ಸಂಬಂಧ ಹೇಳಿಕೆ ನೀಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಗೋಹತ್ಯೆ ನಿಲ್ಲಿಸುತ್ತೇವೆ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆಯನ್ನು 1960ರ ದಶಕದಲ್ಲೇ ಜಾರಿ ಮಾಡಿದೆ. ಇದರಲ್ಲಿ ಹೊಸದೇನೂ ಇಲ್ಲ. ಇದರ ಸಾಧಕ- ಬಾಧಕಗಳ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಹೇಳಿದರು.

Advertisement

ರಾಜ್ಯ ಮಾತ್ರವಲ್ಲದೇ ಬೇರೆ ರಾಜ್ಯಗಳಲ್ಲೂ ಕಾಯ್ದೆ ಜಾರಿಯಲ್ಲಿದೆ. ಆ ಬಗ್ಗೆಯೂ ಚರ್ಚೆ ಮಾಡಲಾಗುತ್ತಿದೆ. ಗೋಹತ್ಯೆ ನಿಲ್ಲಿಸುತ್ತೇವೆ. ಇದರಲ್ಲಿ ಎರಡು ಮಾತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು. ರಾಜ್ಯದಲ್ಲಿ ದಶಕದ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸುವ ಪ್ರಯತ್ನ ನಡೆದಿತ್ತು. 2010ರಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಮಂಡನೆಯಾಗಿತ್ತು. ವಿಧಾನಮಂಡ ಲದ ಉಭಯ ಸದನಗಳಲ್ಲಿ ಅಂಗೀಕವಾರ ವಿಧೇಯಕದ ಬಗ್ಗೆ ರಾಜ್ಯಪಾಲ ಹಂಸರಾಜ್‌ ಭಾರದ್ವಾಜ್‌ ಅವರು ಅಂಕಿತ ವನ್ನೂ ಹಾಕದೆ, ಯಾವುದೇ ನಿರ್ಧಾರವನ್ನೂ ಕೈಗೊಂಡಿರ ಲಿಲ್ಲ.

2013ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ವಿಧೇಯಕವನ್ನು ಹಿಂಪಡೆದಿತ್ತು. ಇತ್ತೀಚೆಗೆ ಬಿಜೆಪಿ ಗೋ ಸಂರಕ್ಷಣಾ ಪ್ರಕೋಷ್ಠದ ಪದಾಧಿಕಾರಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮನವಿ ಸಲ್ಲಿಸಿದ್ದರು. ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸುವ ರೀತಿಯಲ್ಲಿ ಗೃಹ ಸಚಿವ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next