Advertisement

ಸೂರಿಲ್ಲದವರಿಗೆ ಶೀಘ್ರ ಮನೆ ನೀಡಿ: ಸುನೀಲಕುಮಾರ

05:16 PM Feb 10, 2022 | Shwetha M |

ವಿಜಯಪುರ: ಜಿಲ್ಲೆಯ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಸತಿ ರಹಿತರಿಗೆ ಅತಿ ಅಗತ್ಯ ಮೂಲಭೂತ ಸೌಕರ್ಯವಾದ ವಸತಿ ಸೌಲಭ್ಯವ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಹೇಳಿದರು.

Advertisement

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಮಟ್ಟದ ಅಲೆಮಾರಿ, ಅರೆ ಅಲೆಮಾರಿ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ನಿರ್ದಿಷ್ಟ ನೆಲೆ ಇಲ್ಲದೇ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ವಲಸೆ ಹೋಗುವ ಕಾರಣ, ಈ ಜನಾಂಗವು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಅತ್ಯಂತ ಹಿಂದುಳಿದಿದೆ. ಇವರಿಗೆ ವಸತಿ ಸೌಲಭ್ಯವನ್ನು ಕಲ್ಪಿಸಿ, ಒಂದು ಸ್ಥಳದಲ್ಲಿ ನೆಲೆ ನಿಲ್ಲಲು ಅವಕಾಶ ಮಾಡಿಕೊಡಬೇಕು ಎಂದು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಜನರು ಹೆಚ್ಚಾಗಿ ವಾಸಿಸುತ್ತಿರುವ ಕಾಲೋನಿಗಳಲ್ಲಿ ಹಾಗೂ ಹೊಸದಾಗಿ ನಿರ್ಮಾಣ ಮಾಡಿದ ಬಡಾವಣೆಗಳಲ್ಲಿ ಕಾಂಕ್ರೀಟ್‌ ರಸ್ತೆ ಮತ್ತು ಚರಂಡಿ ನಿರ್ಮಾಣವನ್ನು ಮಾಡಿ, ನಾಗರಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ನಿರ್ದೇಶನ ನೀಡಿದರು.

ಇಂಥ ಸಮುದಾಯದವರು ಹೆಚ್ಚಿರುವ ಪ್ರದೇಶಗಳಲ್ಲಿ ಕಂದಾಚಾರ, ಮೂಢನಂಬಿಕೆ ಪದ್ಧತಿಗಳನ್ನು ಕೊನೆಗಾಣಿಸಲು ಕ್ರಮ ಕೈಗೊಳ್ಳಬೇಕು. ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಈರಪ್ಪ ಆಶಾಪುರ ಅವರು ಮೆಟ್ರಿಕ್‌ ಪೂರ್ವದ ವಿಶೇಷ ಪ್ರೋತ್ಸಾಹಧನ ಹಾಗೂ ಮೆಟ್ರಿಕ್‌ ನಂತರದ ವಿದ್ಯಾರ್ಥಿಗಳಿಗೆ ಅರ್ಹತಾ ವಿದ್ಯಾರ್ಥಿ ವೇತನ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಸಭೆಯಲ್ಲಿ ವಿಷಯ ಮಂಡಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next