Advertisement

ಬೆಡ್ ಲಭ್ಯತೆಯ ಬಗ್ಗೆ ವೆಬ್ ಸೈಟ್ ಮೂಲಕ ಮಾಹಿತಿ ನೀಡಬೇಕು: ಡಿಸಿಎಂ ಕಾರಜೋಳ

03:30 PM May 04, 2021 | Team Udayavani |

ಬೆಳಗಾವಿ: ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಪ್ರತಿದಿನ ವೆಬ್‌ಸೈಟ್‌ ಮೂಲಕ ಜನರಿಗೆ ನೀಡಬೇಕು. ಆಕ್ಸಿಜನ್, ರೆಮಿಡಿಸಿವಿರ್ ಮತ್ತಿತರ ಔಷಧೋಪಕರಣಗಳ ಕೊರತೆ ಉಂಟಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮತ್ತು ಅಗತ್ಯ ಚಿಕಿತ್ಸೆ ಒದಗಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲ ಹಿರಿಯ ಅಧಿಕಾರಿಗಳ ಜೊತೆ ಮಂಗಳವಾರ ಝೂಮ್ ಸಭೆಯ ಮೂಲಕ  ಚರ್ಚೆ ನಡೆಸಿದ ಅವರು, ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ಆರೋಗ್ಯದ ಸಮಸ್ಯೆಗಳಿಗೆ ಸ್ಪಂದಿಸಲು ಎಲ್ಲ ಅಧಿಕಾರಿಗಳು ಸಮನ್ವಯತೆಯೊಂದಿಗೆ 24 ಗಂಟೆಯೂ ಕೆಲಸ ಮಾಡಲು ಮುಂದಾಗಬೇಕು ಎಂದು ಹೇಳಿದರು.

ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ಆಕ್ಸಿಜನ್ ಕೊರತೆಯ ಬಗ್ಗೆ ಸಾಕಷ್ಟು ವರದಿಗಳು ಬರುತ್ತಿವೆ. ಆದ್ದರಿಂದ ಜಿಲ್ಲೆಯಲ್ಲಿ ಲಭ್ಯವಿರುವ ಆಕ್ಸಿಜನ್ ದಾಸ್ತಾನು, ದೈನಂದಿನ ಬಳಕೆ ಹಾಗೂ ತುರ್ತು ಸಂದರ್ಭದಲ್ಲಿ ಪೂರೈಕೆಯ ಮೇಲೆ ನಿರಂತರ ನಿಗಾ ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಇದನ್ನೂ ಓದಿ:ಮುಂದಿನ ದಿನಗಳಲ್ಲಿ ಕೋವಿಡ್ ಪರಿಸ್ಥಿತಿಯನ್ನು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ : ಯು ಟಿ ಖಾದರ್

ರೆಮಿಡಿಸಿವಿರ್ ಲಭ್ಯತೆ ಬಗ್ಗೆ ನಿಗಾ ವಹಿಸುವುದರ ಜೊತೆಗೆ ಅದು ಕಾಳಸಂತೆಯಲ್ಲಿ ಮಾರಾಟವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ರೆಮಿಡಿಸಿವಿರ್ ಅನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಆಸ್ಪತ್ರೆಗಳಿಗೆ ನೋಟಿಸ್ ನೀಡಬೇಕು. ಆದರೆ ಸೇವಾ ಶುಲ್ಕ ಮಾತ್ರ ಪಡೆಯಲು ಅವಕಾಶವನ್ನು ಕಲ್ಪಿಸಬೇಕು ಎಂದು ಹೇಳಿದರು.

Advertisement

ಜಿಲ್ಲೆಯಲ್ಲಿ ಲಭ್ಯವಿರುವ ವೆಂಟಿಲೇಟರ್ ಸೌಲಭ್ಯ ಸಮರ್ಪಕ ಬಳಕೆಗೆ‌ ಅಗತ್ಯವಿರುವ ತಂತ್ರಜ್ಞರನ್ನು ನೇಮಿಸಿಕೊಳ್ಳಬೇಕು. ಅಕ್ಕಪಕ್ಕದ ಜಿಲ್ಲೆಗಳ ಅಧಿಕಾರಿಗಳ ಜತೆ ಸಮನ್ವಯ ಸಾಧಿಸಿಕೊಂಡು ಆಕ್ಸಿಜನ್ ಮತ್ತಿತರ ಸೌಲಭ್ಯಗಳನ್ನು ಸಂದರ್ಭಕ್ಕೆ ತಕ್ಕಂತೆ ಪರಸ್ಪರ ವಿನಿಮಯ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಕೋವಿಡ್ ಸೋಂಕು ಹರಡುತ್ತಿರುವುದರಿಂದ ವಲಸೆ ಕಾರ್ಮಿಕರು ಜಿಲ್ಲೆಗೆ ಹಿಂದಿರುಗುತ್ತಿದ್ದಾರೆ. ಈ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕಡ್ಡಾಯವಾಗಿ ಉದ್ಯೋಗ ಕಲ್ಪಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಇದನ್ನೂ ಓದಿ: ಪ್ರಥಮ ಪಿಯುಸಿ ಪರೀಕ್ಷೆ ರದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ

ಜಿಲ್ಲೆಯಲ್ಲಿ ‌ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸಾ ಸೌಲಭ್ಯಗಳ‌ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು, ಆಕ್ಸಿಜನ್ ಕೊರತೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್ ಗಳು ಹಾಗೂ ಚಿಕಿತ್ಸಾ ಸೌಲಭ್ಯಗಳ ಮಾಹಿತಿಯನ್ನು ವೆಬ್ ಸೈಟ್ ಮೂಲಕ ಸಾರ್ವಜನಿಕರಿಗೆ ನೀಡಲು ತಕ್ಷಣವೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಸುಮಾರು 4 ಸಾವಿರ ಬೆಡ್ ಗಳು ಲಭ್ಯವಾಗಿರುತ್ತವೆ. ಇದರಲ್ಲಿ 1909 ಆಕ್ಸಿಜನ್ ವ್ಯವಸ್ಥೆ ಕಲ್ಪಿಸಬಹುದಾದ ಬೆಡ್ ಗಳು; 179 ಐಸಿಯು ಬೆಡ್; 137 ಐಸಿಯು ಜತೆಗೆ ವೆಂಟಿಲೇಟರ್ ಸೌಲಭ್ಯ ಹೊಂದಿರುವ ಬೆಡ್ ಗಳಿವೆ. ಇದಲ್ಲದೇ 77 ಹೈಫ್ಲೋ ಆಕ್ಸಿಜನ್ ಹಾಗೂ 543 ಹೈಫ್ಲೋ ನೇಸಲ್ ಆಕ್ಸಿಜನ್ ಸೌಲಭ್ಯ ಹೊಂದಿರುವ ಬೆಡ್ ಗಳಿವೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.

ಇದರಲ್ಲಿ ಒಂದು ಸಾವಿರ ಬೆಡ್ ಗಳಿಗೆ ನಿರಂತರವಾಗಿ 24 ಗಂಟೆಗಳ ಕಾಲ ಆಕ್ಸಿಜನ್ ಒದಗಿಸುವ ಸಾಮರ್ಥ್ಯವಿದೆ ಎಂದು ತಿಳಿಸಿದರು.

ಲಸಿಕಾಕರಣದಲ್ಲಿ ಜಿಲ್ಲೆಯು ಮುಂಚೂಣಿಯಲ್ಲಿದ್ದು, ಶೇ.40 ರಷ್ಟು ಲಸಿಕಾಕರಣವಾಗಿದೆ. 32 ಸಾವಿರ ಲಸಿಕೆಗಳು ಜಿಲ್ಲೆಗೆ ಸದ್ಯದಲ್ಲಿಯೇ ಪೂರೈಕೆಯಾಗಲಿವೆ ಎಂದು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next