ಬೆಳಗಾವಿ: ಪ್ರಜ್ಞಾವಂತ ಹಾಗೂ ಪ್ರಭಾವಿ ರಾಜಕಾರಣಿಯಾದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಡಿಸಿಎಂ ಸ್ಥಾನ ನೀಡಬೇಕೆಂದು ದಲಿತ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ.
ಬೆಳಗಾವಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಲಿತ ಸಂಘಟನೆಗಳ ಮುಖಂಡ ಮಲ್ಲೇಶ ಚೌಗಲೆ ಈ ಕುರಿತು ಜಿಲ್ಲೆಯ ವಿವಿಧ ದಲಿತ ಸಂಘಟನೆಗಳ ಒಕ್ಕೂಟ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ, ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೆವಾಲಾ ಅವರಿಗೆ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಡಿಸಿಎಂ ಹುದ್ದೆ ನೀಡಬೇಕೆಂದು ಮನವಿ ಸಲ್ಲಿಸಿದೆ ಎಂದು ಹೇಳಿದರು.
ಸಚಿವ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಶೋಷಿತ ಸಮುದಾಯಗಳ ಪ್ರಗತಿ ಜೊತೆಗೆ ಇತರೆ ಸಮುದಾಯದ ಮುಖಂಡರನ್ನು ಒಗ್ಗೂಡಿಸಿ, ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟಿದ್ದಾರೆ ಎಂದರು.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲಲು ಸತೀಶ ಜಾರಕಿಹೊಳಿ ಅವರ ಪಾತ್ರವೂ ಇದೆ. ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಕೂಡಲೇ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿದರು.
ಎಲ್ಲಾ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಮನವಿ ಪತ್ರದಲ್ಲಿ ರಕ್ತದ ಸಹಿ ಮಾಡುವ ಮೂಲಕ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಶೀಘ್ರವೇ ಡಿಸಿಎಂ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸುತ್ತಿದ್ದೇವೆ ಎಂದು ಒಕ್ಕೂಟದ ಮುಖಂಡರು ಹೇಳಿದರು.