Advertisement

ಉದ್ಯೋಗ ನೀಡಿ ಗುಳೆ ಹೋಗುವುದನ್ನು ತಡೆಯಿರಿ

05:39 PM Jul 29, 2018 | Team Udayavani |

ಬಳ್ಳಾರಿ: ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡು ಸ್ಥಳೀಯವಾಗಿಯೇ ಉದ್ಯೋಗ ನೀಡುವ ಮೂಲಕ ಗ್ರಾಮೀಣ ಭಾಗದ ಜನರು ಕೆಲಸಕ್ಕಾಗಿ ನಗರ, ಪಟ್ಟಣಗಳಿಗೆ ಗುಳೆ ಹೋಗುವುದನ್ನು ತಪ್ಪಿಸಬೇಕು ಎಂದ ಕೊಪ್ಪಳ ಸಂಸದ ಸಂಗಣ್ಣ ಕರಡಿ, ಅಧಿಕಾರಿಗಳಿಗೆ ತಾಕೀತು ಮಾಡಿದರು. ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಅಭಿವೃದ್ಧಿ ಸಹಕಾರ ಮತ್ತು ಮೇಲ್ವಿಚಾರಣಾ (ದಿಶಾ) ಸಮಿತಿಯ ಮೊದಲ ತ್ತೈಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

Advertisement

ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಗೆ ಕೆಲಸ ನೀಡಲು ಅವಕಾಶವಿದೆ. ಆದರೂ ಜಿಲ್ಲೆಯ ತಾಂಡಾ ಸೇರಿದಂತೆ ವಿವಿಧ ಗ್ರಾಮಗಳಿಂದ ನಗರ, ಪಟ್ಟಣ ಪ್ರದೇಶಗಳಿಗೆ ಗುಳೆ ಹೋಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಸಂಬಂಧಪಟ್ಟ ಇಲಾಖೆಯ ಮೇಲಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ, ಗುಳೆ ಹೋಗುವುದನ್ನು ತಪ್ಪಿಸಬೇಕು.

ಸ್ಥಳೀಯವಾಗಿಯೇ ಎಲ್ಲರಿಗೂ ಉದ್ಯೋಗ ಕಲ್ಪಿಸಿ, ನಿಗದಿತ ಅವಧಿಯೊಳಗೆ ಫಲಾನುಭವಿಗಳ ಕೈಗೆ ಕೂಲಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಅವರ ಮಕ್ಕಳ ಶಿಕ್ಷಣ ಕುಂಠಿತವಾಗದಂತೆ ಕ್ರಮ ಕೈಗೊಳ್ಳಬೇಕು.ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವಹಿಸಬಾರದು ಎಂದು ಎಚ್ಚರಿಕೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌ , ಜಿಲ್ಲೆಯ ಯಾವ ಕಡೆಗಳಲ್ಲೂ ಕೂಲಿಕಾರರು ಗುಳೆ ಹೋದ ಉದಾಹರಣೆಗಳಿಲ್ಲ. ಮಳೆಯಾಶ್ರಿತ ಪ್ರದೇಶವಾದ ಕೂಡ್ಲಗಿ ತಾಲೂಕುಗಳಲ್ಲಿ ಬೆರಣಿಕೆಯಷ್ಟು ಕೂಲಿಕಾರರು ಗುಳೆ ಹೋಗಿರಬಹುದು. ಅದಕ್ಕೂ ಕೂಡ ಕೂಡಲೇ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಗ್ರಾಮೀಣ ಭಾಗದ ಎಲ್ಲ ಕೂಲಿಕಾರರಿಗೆ ಉದ್ಯೋಗ ಕಲ್ಪಿಸುವುದಾಗಿ ಭರವಸೆ ನೀಡಿದರು.

ಬಳ್ಳಾರಿ ತಾಪಂ ಇಒ ಜಾನಕಿರಾಮ್‌, ಸಭೆಗೆ ಮಾಹಿತಿ ನೀಡುತ್ತಿದ್ದ ಸಂದರ್ಭದಲ್ಲಿ ಮಧ್ಯ ಪ್ರವೇಶಿದ ಸಂಸದ ಸಂಗಣ್ಣ ಕರಡಿ, ಪ್ರಸಕ್ತ ವರ್ಷ ಉದ್ಯೋಗ ಖಾತ್ರಿ ಯೋಜನೆಯಡಿ ಎಷ್ಟು ಕಾಮಗಾರಿಗಳು ನಡೆದಿವೆ? ಎಷ್ಟು ಜನರಿಗೆ ಕೆಲಸ ನೀಡಲಾಗಿದೆ? ಎಂಬುದನ್ನು ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದರು.

Advertisement

ಇದಕ್ಕೆ ಪ್ರತಿಕ್ರಿಯಿಸಿದ ತಾಪಂ ಇಒ ಜಾನಕಿರಾಮ್‌, ಗೋದಾಮು ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆಯಾದರೂ, ಜಿಎಸ್‌ಟಿ ಸಮಸ್ಯೆಯಿಂದಾಗಿ ಗುತ್ತಿಗೆದಾರರಾರೂ ಮುಂದೆ ಬರುತ್ತಿಲ್ಲ ಎಂದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಂಗಣ್ಣ ಕರಡಿ, ನಾನು ಕೇಳುತ್ತಿರುವುದು ಏನು? ನೀವು ಏನ್‌ ಹೇಳುತ್ತಿದ್ದೀರಿ. ಸಭೆಗೆ ಸರಿಯಾಗಿ ಮಾಹಿತಿ ನೀಡಿ ಎಂದು ಸೂಚಿಸಿದರು. ಮಧ್ಯ ಪ್ರವೇಶಿಸಿದ ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌, ಸರ್ಕಾರಿ ಅಧಿಕಾರಿಗಳೇ ಜಿಎಸ್‌ಟಿ ಕಾಯ್ದೆ ಅಡ್ಡ ಬರುತ್ತಿದೆ ಅಂದ್ರೆ ಹೇಗ್ರೀ? ಜಿಎಸ್‌ಟಿ ಕಾಯ್ದೆಯಿಂದ ಅಕ್ರಮಗಳನ್ನು ತಡೆಗಟ್ಟಬಹುದು. ಅದಕ್ಕಾಗಿಯೇ ಕೇಂದ್ರ ಸರ್ಕಾರ ಜಿಎಸ್‌ಟಿಯನ್ನು ಜಾರಿಗೆ ತಂದಿದೆ.  ಅದನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು
ಸೂಚಿಸಿದರು.

ಜಿಪಂ ಸಿಇಒ ಡಾ| ಕೆ.ವಿ.ರಾಜೇಂದ್ರ ಮಾತನಾಡಿ, ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆಯನ್ನಾಗಿಸಲು ಕೇವಲ
ಶೇ.5ರಷ್ಟು ಗುರಿ ಬಾಕಿಯಿದ್ದು, ಆ.15ರೊಳಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದ ಗ್ರಾಪಂ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಮಾನವ ದಿನಗಳ ಸೃಜನೆಯಲ್ಲಿ ಉತ್ತಮ ಸಾಧನೆ ತೋರಲಾಗುತ್ತಿದೆ. 2018-19ನೇ ಸಾಲಿನ
ಮುಖ್ಯಮಂತ್ರಿಯವರ 21 ಅಂಶಗಳ ಪ್ರಕಾರ ಮುಂದಿನ ಮೂರು ತಿಂಗಳಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಕಾಂಪೌಂಡ್‌, ಆಟದ ಮೈದಾನ ಹಾಗೂ ಶೌಚಗೃಹ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಪಿಎಂಜಿಎಸ್‌ವೈ ಯೋಜನೆಯಡಿ ನಿರ್ವಹಿಸಿದ ರಸ್ತೆ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿದ ಗುತ್ತಿಗೆದಾರರಿಗೆ ನೋಟಿಸ್‌ ನೀಡಬೇಕು.

ಇಲ್ಲವಾದಲ್ಲಿ ಅಧಿಕಾರಿಗಳಿಗೆ ನೋಟಿಸ್‌ ನೀಡಲಾಗುವುದು ಎಂದು ಎಚ್ಚರಿಸಿದರು. ಬಳಿಕ ವಿವಿಧ ಇಲಾಖೆ ಅಧಿಕಾರಿಗಳು ಆಯಾ ಇಲಾಖೆಯ ಪ್ರಗತಿ ವರದಿಯನ್ನು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ, ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next