ಮೈಸೂರು: ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಬಹುಜನ ವಿದ್ಯಾರ್ಥಿ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮುಖ್ಯಮಂತ್ರಿ ಕುಮಾರಸ್ವಾಮಿ ಹಿಂದಿನ ಸರ್ಕಾರದ ಯೋಜನೆಯಾದ ಎಸ್‌ಸಿ-ಎಸ್‌ಟಿ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ವ್ಯವಸ್ಥೆಯನ್ನು 2018-19ನೇ ಶೈಕ್ಷಣಿಕ ವರ್ಷದಲ್ಲೂ ಮುಂದುವರಿಸಿರುವುದು ಸ್ವಾಗತಾರ್ಹ. ಆದರೆ, ಇತರೆ ಹಿಂದುಳಿದ ವರ್ಗಗಳು, ಸಾಮಾನ್ಯ ವರ್ಗಗಳು ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳನ್ನು ಈ ಯೋಜನೆಯಿಂದ ಕೈ ಬಿಟ್ಟಿರುವುದು ಸರಿಯಾದ ಕ್ರಮವಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರದ ಈ ನಿರ್ಧಾರ, ದಲಿತ ಸಮುದಾಯದ ವಿದ್ಯಾರ್ಥಿಗಳನ್ನು ಇತರೆ ವರ್ಗದ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಕಾಣುವ ಪರಿಸ್ಥಿತಿ ಎದುರಾಗಿದೆ. ರಾಜ್ಯಸರ್ಕಾರಕ್ಕೆ ನಿಜವಾಗಿ ದಲಿತ ಪರ ಕಾಳಜಿ ಇದ್ದು, ದಲಿತರ ಶ್ರೇಯೋಭಿವೃದ್ಧಿ ಬಯಸುವುದಾದರೆ, ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ, ಹಾಸ್ಟೆಲ್ ವಿದ್ಯಾರ್ಥಿಗಳ ಊಟದ ಭತ್ಯೆ ಹಾಗೂ ವಿದ್ಯಾರ್ಥಿ ವೇತನ ಹೆಚ್ಚಿಸುವ,
ಸರ್ಕಾರಿ ಶಾಲೆಗಳಲ್ಲಿ ಉದ್ಯೋಗಾಧಾರಿತ ಶಿಕ್ಷಣ ನೀಡುವ, ಪ್ರಾಥಮಿಕ ಹಂತದಲ್ಲೇ ಇಂಗ್ಲಿಷ್ ಶಿಕ್ಷಣ ನೀಡುವ ಕೆಲಸಕ್ಕೆ ಮುಂದಾಗಲಿ. ಅದನ್ನು ಬಿಟ್ಟು ಸರ್ಕಾರ ಜಾರಿ ಮಾಡುವ ಇಂತಹ ಯೋಜನೆಗಳನ್ನು ದಲಿತರ ಅವಮಾನಕ್ಕೆ ಕಾರಣವಾಗುತ್ತಿದ್ದು, ಕೂಡಲೇ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಹುಜನ ವಿದ್ಯಾರ್ಥಿ ಸಂಘದ ಜಿಲ್ಲಾ ಸಂಯೋಜಕ ವಸಂತ್, ಜಿಲ್ಲಾಧ್ಯಕ್ಷ ನವೀನ್ ಮೌರ್ಯ, ಮುಖಂಡರಾದ ಸಾಗರ್, ರಾಜೇಶ್, ಪ್ರತಾಪ್, ನಾರಾಯಣಸ್ವಾಮಿ, ರವಿಕುಮಾರ್, ಮಧುಸೂದನ್ ಮೊದಲಾದವರು ಭಾಗವಹಿಸಿದ್ದರು.