ರಾಮದುರ್ಗ: ಸ್ಥಳೀಯ ತಾ.ಪಂ ಸಭಾಭವನದಲ್ಲಿ ಸೋಮವಾರ ಕೇಂದ್ರ ರೇಲ್ವೆ ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿ ಸಮ್ಮುಖದಲ್ಲಿ ಕೊವೀಡ್-19 ಪ್ರಗತಿ ಪರಿಶೀಲನೆ ಸಭೆ ನಡೆಯಿತು.
ಸಚಿವ ಸುರೇಶ ಅಂಗಡಿ ಮಾತನಾಡಿ, ಉದ್ಯೋಗ ಅರಿಸಿಕೊಂಡು ವಲಸೆ ಹೋಗುವ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಅಗತ್ಯ ಕಾಮಗಾರಿ ಕೈಗೊಂಡು ಸ್ಥಳೀಯವಾಗಿಯೇ ಉದ್ಯೋಗ ನೀಡಬೇಕು ಎಂದು ಸೂಚಿಸಿದರು.
ಕೋವಿಡ್-19 ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಇದರಿಂದಾಗಿ ದೇಶದ ಯುವಕರಿಗೆ ಉದ್ಯೋಗ ಕಲ್ಪಿಸಿ, ಆರ್ಥಿಕವಾಗಿ ಸದೃಢರಾಗಿ, ಸ್ವದೇಶಿ ಕಲ್ಪನೆಯಿಂದ ಜೀವನ ನಡೆಸಲು ಸಾಧ್ಯವಾಗಲಿದೆ ಎಂದರು. ಯಾರೂ ಹಸಿವಿನಿಂದ ಬಳಲಬಾರದು ಎಂದು ರಾಜ್ಯ ಸರಕಾರ ಎರಡು ತಿಂಗಳ ಪಡಿತರ ಹಾಗೂ ಕೇಂದ್ರ ಸರಕಾರ ಗರೀಬ್ ಕಲ್ಯಾಣ ಯೋಜನೆಯಡಿ 10 ಕೆಜಿ ಅಕ್ಕಿ ಮತ್ತು ಒಂದು ಕೆಜಿ ಬೇಳೆ ವಿತರಿಸಿದೆ. ಜೊತೆಗೆ ಉಜ್ವಲಾ ಯೋಜನೆಯಡಿ 3 ತಿಂಗಳ ಗ್ಯಾಸ್ ಉಚಿತವಾಗಿ ನೀಡಿದೆ ಎಂದರು.
ಕೋವಿಡ್-19 ಕಾರ್ಯದಲ್ಲಿ ತೊಡಗಿರುವ ಆಶಾ, ಅಂಗನವಾಡಿ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳಬೇಕೆಂದು ಸಚಿವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕಿಗೆ ವಿದೇಶದಿಂದ ಹಾಗೂ ಹೊರ ರಾಜ್ಯದಿಂದ ಬಂದ ಜನರನ್ನು ಕ್ವಾರಂಟೈನ್ ಮಾಡಲಾಗಿತ್ತು. ಅದರಲ್ಲಿ 105 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದೆ. ಅವೆಲ್ಲ ನೆಗೆಟಿವ್ ಬಂದಿವೆ ಎಂದು ತಾಲೂಕು ವೈದ್ಯಾಧಿಕಾರಿ ಮಹೇಶ ಚಿತ್ತರಗಿ ಸಭೆಗೆ ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿ, ಸರಕಾರಿ ನೌಕರರು ತಾಲೂಕಿನಲ್ಲಿ ಉತ್ತಮ ಕೆಲಸ ಮಾಡಿದ್ದರಿಂದ ಎಲ್ಲರೂ ಆರೋಗ್ಯವಾಗಿದ್ದೇವೆ ಎಂದು ಅಭಿನಂದಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ, ತಹಶೀಲ್ದಾರ ಗಿರೀಶ ಸ್ವಾಧಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.