ಗದಗ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಂಗ್ರಹಿಸಿದ ದತ್ತಾಂಶಗಳನ್ನು ಅಗತ್ಯ ಸಂದರ್ಭದಲ್ಲಿ ಬಳಸಿಕೊಳ್ಳಲು ಸುಲಭವಾಗಿ ಲಭ್ಯವಾಗುವಂತೆ ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ರಾಜ್ಯದ ಸರ್ವಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ಎಂ.ಟಿ. ರೇಜು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ -19 ಸೋಂಕು ನಿಯಂತ್ರಣ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿ, ಕೋವಿಡ್-19 ಸೋಂಕಿನ ನಿಯಂತ್ರಣ ಕುರಿತಂತೆ ದತ್ತಾಂಶ ಸಂಗ್ರಹಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಆ್ಯಪ್ ಗಳನ್ನು ಬಿಡುಗಡೆ ಮಾಡುತ್ತಿವೆ. ಅವುಗಳಿಗೆ ಆರೋಗ್ಯ ಇಲಾಖೆ ಸಂಗ್ರಹಿಸಿದ ದತ್ತಾಂಶಗಳನ್ನು ಅಪ್‌ಲೋಡ್ ಮಾಡಲು ಅನುಕೂಲವಾಗುವ ರೀತಿಯಲ್ಲಿ ದತ್ತಾಂಶ ಸಂಗ್ರಹವಾಗಬೇಕು.
ಜಿಲ್ಲೆಗೆ ಹೊರಗಿನಿಂದ ಬರುವ ವಲಸೆ ಕಾರ್ಮಿಕರಿಗೆ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕೊಡುವಂತೆ ಗ್ರಾಪಂ ಟಾಸ್ಕ್ ಫೋರ್ಸ್ ಸಮಿತಿ ಕ್ರಮ ಜರುಗಿಸಬೇಕು. ಹೊರ ಜಿಲ್ಲೆಗಳ ಕಾರ್ಮಿಕರಿಗೆ ಊಟ ಹಾಗೂ ದಿನಸಿ ನೀಡುವ ಕುರಿತು ಕ್ರಮ ವಹಿಸಬೇಕು. ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಗ್ರಾಪಂಗಳ ವ್ಯಾಪ್ತಿಯಲ್ಲಿ ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳುವಂತೆ ಮತ್ತು ಮಾಸ್ಕ್ ಹಾಕಿಕೊಳ್ಳದವರಿಗೆ ಸರ್ಕಾರದಿಂದ ನಿರ್ದೇಶಿತ ದಂಡ ವಿಧಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಳಿಸಿದರು.
ಜಿಪಂ ಸಿಇಒ ಡಾ| ಆನಂದ ಕೆ. ಮಾತನಾಡಿ, ಜಿಲ್ಲೆಯ 122 ಗ್ರಾಪಂಗಳ ವ್ಯಾಪ್ತಿಯಲ್ಲಿ ಈವರೆಗೆ 1.3 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸರ್ಕಾರದಿಂದ ನೇರವಾಗಿ ಹಣ ಪಾವತಿಯಾಗುತ್ತಿದೆ. ಗ್ರಾಮ ವ್ಯಾಪ್ತಿಗಳಲ್ಲಿ ಕೋವಿಡ್ -19ರ ಕುರಿತು ಜಾಗೃತಿ ಮೂಡಿಸಲು ಟಾಸ್ಕ್ಫೋರ್ಸ್ ಸಮಿತಿ ಕಾರ್ಯನಿರ್ವಹಿಸುತ್ತಿದೆ. ಕೋವಿಡ್ ಪೀಡಿತ ರಾಜ್ಯ ಹಾಗೂ ಜಿಲ್ಲೆಗಳಿಂದ ಆಗಮಿಸಿದವರನ್ನು ಪತ್ತೆ ಮಾಡುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದರು.
ಜಿಲ್ಲೆಯ 5 ಪ್ರಕರಣಗಳ ಕುರಿತಂತೆ ಅವರ ಪ್ರಾಥಮಿಕ ಹಾಗೂ ದ್ವಿತೀಯ ಹಂತದ 987 ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಪಿ-107 ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ 23 ಪ್ರಥಮ, ಹಾಗೂ 303 ದ್ವಿತೀಯ ಸಂಪರ್ಕದ ವ್ಯಕ್ತಿಗಳನ್ನು ಪತ್ತೆ ಹಚ್ಚಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶದನಂತೆ ಕಂಟೇನ್ಮೆಂಟ್ ಪ್ರದೇಶ ಹೊರತುಪಡಿಸಿ ಲಾಕ್‌ಡೌನ್ ನಿಂದ ವಿನಾಯಿತಿ ನೀಡಿದ್ದು, ಸಾಮಾಜಿಕ ಅಂತರ, ಮುಖಕ್ಕೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಇದು ಉಲ್ಲಂಘನೆಯಾದರೆ ಆ ಪ್ರದೇಶಗಳಲ್ಲಿ ಮತ್ತೆ ಲಾಕ್ ಡೌನ್ ವಿಧಿಸಲು ಅವಕಾಶವಿದೆ ಎಂದರು. ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬರುವವರನ್ನು ಗದಗ ಹೊಸ ಬಸ್ ನಿಲ್ದಾಣವನ್ನು ಪ್ರವೇಶ ಕೇಂದ್ರವನ್ನಾಗಿಸಿದ್ದು, ಅವರ ಆರೋಗ್ಯ ಚಿಕಿತ್ಸೆ ಹಾಗೂ ಎಲ್ಲ ಮಾಹಿತಿಯನ್ನು ಪಡೆದು ಅಗತ್ಯದ ಕ್ರಮ ಜರುಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ವಿವರಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸತೀಶ ಬಸರಿಗಿಡದ ಮಾತನಾಡಿ, ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ನಿರ್ದೇಶನದಂತೆ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರ ತಂಡಗಳ ಮೂಲಕ ಆರೋಗ್ಯ ಸಮೀಕ್ಷೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ಎಸ್‌ಪಿ ಯತೀಶ್ ಎನ್., ಅಪರ ಜಿಲ್ಲಾಧಿಕಾರಿ ಸತೀಶ್‌ಕುಮಾರ್ ಎಂ., ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ, ಜಿಮ್ಸ್ ನಿರ್ದೇಶಕ ಡಾ| ಪಿ.ಎಸ್. ಭೂಸರೆಡ್ಡಿ ಸೇರಿದಂತೆ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.