ಹಾವೇರಿ: ಶಾಲಾ-ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ವಿತರಿಸಲು ಒತ್ತಾಯಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ನಗರದ ಜಿ.ಎಚ್. ಕಾಲೇಜು ಎದುರು ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಶಾಲಾ-ಕಾಲೇಜಗಳು ಪ್ರಾರಂಭವಾಗಿ ತಿಂಗಳ ಕಳೆದಿದ್ದರೂ ಇನ್ನೂ ವಿದ್ಯಾರ್ಥಿಗಳಿಗೆ ಬಸ್‌ಪಾಸ್ ವಿತರಿಸುತ್ತಿಲ್ಲ. ಜಿಲ್ಲೆ ಸತತ ಬರಗಾಲದಿಂದ ಕೂಡಿದ್ದು, ಇಲ್ಲಿಯ ಗ್ರಾಮೀಣ ಭಾಗದಿಂದ ಶಿಕ್ಷಣ ಪಡೆಯಲು ನೂರಾರು ವಿದ್ಯಾರ್ಥಿಗಳು ನಗರಕ್ಕೆ ಆಗಮಿಸುತ್ತಿದ್ದಾರೆ. ಬಡ ಮತ್ತು ಪ್ರತಿಭಾವಂತ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡಬೇಕು ಎಂದು ಆಗ್ರಹಿಸಿದರು.
ಈ ಹಿಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರ ಸರ್ಕಾರ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್‌ಪಾಸ್ ನೀಡಿ ವಿದ್ಯಾರ್ಥಿಗಳಲ್ಲಿ ತಾರತಮ್ಯ ನೀತಿ ಅನುಸರಿಸಿದ್ದರಿಂದ ಉಗ್ರ ಹೋರಾಟ ಮಾಡಲಾಯಿತು. ನಂತರ ಸಮ್ಮಿಶ್ರ ಸರ್ಕಾರದ 2018-19ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಎಸ್‌ಟಿ, ಎಸ್‌ಸಿ ಸೇರಿದಂತೆ ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಅದು ಇದುವರೆಗೂ ಅನುಷ್ಠಾನಗೊಂಡಿಲ್ಲ ಎಂದರು.
ರಾಜ್ಯದ ರೈತಾಪಿ ಕುಟುಂಬಗಳು ಸಂಕಷ್ಟದಲ್ಲಿವೆ. ಹಿಂದುಳಿದ, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಎಲ್ಲ ವರ್ಗದ ಎಲ್ಲ ಸ್ತರದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡಬೇಕು. ಇಲ್ಲವಾದರೆ ಮುಂದಿನ ದಿನಮಾನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಓಡಾಡುವ ಬಸ್‌ಗಳು ವಿದ್ಯಾರ್ಥಿಗಳು ಕಾಣಿಸುತ್ತಿದಂತೆ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದೆ ಹಾಗೆಯೇ ಹೋಗುತ್ತಿವೆ. ಕೆಲವು ಬಸ್‌ಗಳಲ್ಲಿ ವಿದ್ಯಾರ್ಥಿಗಳ ಬಸ್‌ಪಾಸ್ ನಡೆಯುವುದಿಲ್ಲ ಎಂದು ಹೇಳಿ ನಿರ್ವಾಹಕರು ಅರ್ಧ ದಾರಿಯಲ್ಲಿ ಇಳಿಸಿ ಹೋಗುತ್ತಾರೆ. ಇದರ ಬಗ್ಗೆ ಈ ಹಿಂದೆ ಡಿಪೋ ಅಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿದೆ. ಆದರೆ, ಈವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಎಲ್ಲ ಬಸ್‌ಗಳಲ್ಲಿಯೂ ವಿದ್ಯಾರ್ಥಿಗಳ ಬಸ್‌ಪಾಸ್ ಪರಿಗಣಿಸಲು ಸೂಚಿಸಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪವನಕುಮಾರ, ಶರೀಫ ಜಾಲಿಹಾಳ, ಸಚಿನ್ ಆರ್.ಜಿ., ವಿಶ್ವನಾಥ ಡಿ., ಆಕಾಶ ಹುಳಗುತ್ತಿ, ಜಗದೀಶ, ಸಾಯಿಕುಮಾರ ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.