ಬಿರ್ಭುಮ್ : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ 42 ಸ್ಥಾನಗಳ ಪೈಕಿ 35 ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದರೆ 2025 ರ ನಂತರ ಟಿಎಂಸಿ ಸರಕಾರ ಉಳಿಯುವುದಿಲ್ಲ ಎಂದು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ.
ರ‍್ಯಾಲಿಯಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಾ ”ಹಿಟ್ಲರ್ ಮಾದರಿಯ ಆಡಳಿತ ನಡೆಸುತ್ತಿದ್ದಾರೆ. 2024ರಲ್ಲಿ ರಾಜ್ಯದಲ್ಲಿ 35ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರಕ್ಕೆ ಬಂದರೆ, ರಾಮನವಮಿ ರ‍್ಯಾಲಿಗಳ ಮೇಲೆ ದಾಳಿ ಮಾಡಲು ಯಾರೂ ಧೈರ್ಯ ಮಾಡುವುದಿಲ್ಲ” ಎಂದರು.
“ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿಯಾಗುತ್ತಾರೆ ಎಂದು ಸ್ಪಷ್ಟವಾಗಿ ಹೇಳುತ್ತೇನೆ. 2024 ರ ಲೋಕಸಭಾ ಚುನಾವಣೆಯಲ್ಲಿ ನಮಗೆ ಪಶ್ಚಿಮ ಬಂಗಾಳದಿಂದ 35 ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿ ಮತ್ತು 2025 ರ ನಂತರ ಮಮತಾ ಬ್ಯಾನರ್ಜಿ ಸರ್ಕಾರವು ಉಳಿಯುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದರು.
”ಮಮತಾ ಬ್ಯಾನರ್ಜಿ ಅವರು ತಮ್ಮ ಸೋದರಳಿಯ ಮುಂದಿನ ಸಿಎಂ ಆಗುವ ಕನಸು ಕಾಣುತ್ತಿರಬಹುದು, ಆದರೆ ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿ ಬಿಜೆಪಿಯವರೇ ಆಗಿರುತ್ತಾರೆ. ಭ್ರಷ್ಟ ಟಿಎಂಸಿ ವಿರುದ್ಧ ಹೋರಾಡಿ ಸೋಲಿಸಲು ಬಿಜೆಪಿ ಮಾತ್ರ ಸಾಧ್ಯ” ಎಂದರು.
ಶಾ ಅವರ ಹೇಳಿಕೆಗಳ ಕುರಿತು ಟಿಎಂಸಿಯಿಂದ ತೀಕ್ಷ್ಣವಾದ ಪ್ರತಿಕ್ರಿಯೆ ಬಂದಿದ್ದು “ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಂವಿಧಾನಿಕ” ಎಂದು ಹೇಳಿದೆ.
ಮಮತಾ ಬ್ಯಾನರ್ಜಿ ಸರಕಾರವು 2026 ರಲ್ಲಿ ತನ್ನ ಮೂರನೇ ಅವಧಿಯನ್ನು ಪೂರ್ಣಗೊಳಿಸಲಿದೆ. ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಟಿಎಂಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದರಾಗಿದ್ದಾರೆ. 2019ರ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 18 ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು.