ಬೆಳಗಾವಿ: ಮಾನವ ಹಕ್ಕುಗಳ ಆಯೋಗಕ್ಕೆ ಸಂಬಂಧಿಸಿದ ಪ್ರಕರಣಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮೂರು ತಿಂಗಳೊಳಗಾಗಿ ವರದಿ ಸಲ್ಲಿಸಬೇಕೆಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ರೂಪಕ ಕುಮಾರ ದತ್ತಾ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಮಾನವ ಹಕ್ಕುಗಳ ಆಯೋಗದ ಬಾಕಿ ಪ್ರಕರಣಗಳ ಕುರಿತ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಯೋಗಕ್ಕೆ ವರದಿ ಸಲ್ಲಿಸಲು ವಿಳಂಬ ಮಾಡಿದರೆ ನೋಟಿಸ್ ನೀಡಲಾಗುವುದು. ನಂತರವೂ ಉತ್ತರ ನೀಡದಿದ್ದರೆ ಸಂಬಂಧಿಸಿದ ಅಧಿಕಾರಿಗಳಿಗೆ ಸಮನ್ಸ್ ಜಾರಿ ಮಾಡಲಾಗುವುದು. ಹೀಗಾಗಿ ಸಕಾಲಕ್ಕೆ ವರದಿ ಸಲ್ಲಿಸುವಂತೆ ಎಚ್ಚರಿಸಿದರು.
ಕೆಳಹಂತದ ಅಧಿಕಾರಿಗಳ ವರದಿಯನ್ನೇ ಜಿಲ್ಲಾಮಟ್ಟದ ಅಧಿ ಕಾರಿಗಳು ಯಥಾವತ್ತಾಗಿ ಕಳುಹಿಸದೇ ಖುದ್ದಾಗಿ ಪ್ರಕರಣ ಪರಿಶೀಲಿಸಿ, ವಿಚಾರಣೆ ನಡೆಸಿ ವರದಿ ಕಳುಹಿಸಿಕೊಡಬೇಕು. ಪ್ರಕರಣಗಳು ವಿಳಂಬವಾಗುವುದರಿಂದ ಸಾರ್ವಜನಿಕರಿಗೆ ಆಡಳಿತ ವ್ಯವಸ್ಥೆ ಮೇಲೆ ನಂಬಿಕೆ ಇರುವುದಿಲ್ಲ. ಹೀಗಾಗಿ ವರದಿ ಸಲ್ಲಿಸಲು ವಿಳಂಬ ಮಾಡುವುದು ಸಮಂಜಸವಲ್ಲ. ಜಿಲ್ಲಾಮಟ್ಟದ ಅಧಿಕಾರಿಗಳು ಪ್ರಕರಣಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲಿಸಿ ಕಳುಹಿಸಿಕೊಡುವುದರಿಂದ ಆಯೋಗಕ್ಕೂ ಶೀಘ್ರದಲ್ಲೇ ಪ್ರಕರಣ ಇತ್ಯರ್ಥ ಪಡಿಸಲು ಅನುಕೂಲವಾಗುತ್ತದೆ ಎಂದರು.
ಉತ್ತಮ ಆಡಳಿತಕ್ಕೆ ಅನುಕೂಲ ಮಾಡಿಕೊಡುವುದು ಆಯೋಗದ ಉದ್ದೇಶವಾಗಿದೆ. ಜಿಲ್ಲಾಮಟ್ಟದಲ್ಲಿ ಆಡಳಿತ ಸರಿಯಾಗಿದ್ದರೆ ಇಡೀ ರಾಜ್ಯವೇ ಸುವ್ಯವಸ್ಥಿತವಾಗಿರುತ್ತದೆ. ಹೀಗಾಗಿ ಜಿಲ್ಲಾಮಟ್ಟದ ಅಧಿ ಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರಕುಮಾರ ರೆಡ್ಡಿ, ಅಪರ ಜಿಲ್ಲಾಧಿಕಾರಿ ಎಚ್.ಬಿ. ಬೂದೆಪ್ಪ, ಮಹಾನಗರ ಪಾಲಿಕೆ ಆಯುಕ್ತ ಶಶಿಧರ ಕುರೇರ ಸೇರಿದಂತೆ ಜಿಲ್ಲಾ ಪಂಚಾಯತ, ಪೊಲೀಸ್ ಇಲಾಖೆ, ಆರೋಗ್ಯ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಪ್ರಕರಣಗಳ ವಿಚಾರಣೆ
ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಬಾಕಿ ಇರುವ ಪ್ರಕರಣಗಳ ಕುರಿತು ರೂಪಕ ಕುಮಾರ ದತ್ತಾ ಅವರು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ಅವುಗಳ ಬಗ್ಗೆ ಶೀಘ್ರವೇ ಆಯೋಗಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದರು.