ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನ.2ರಿಂದ 4ರ ವರೆಗೆ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ ಎಂದು ಸಚಿವ ಮುರುಗೇಶ್ ಆರ್. ನಿರಾಣಿ ತಿಳಿಸಿದ್ದಾರೆ.
ಗುರುವಾರ ಖಾಸಗಿ ಹೊಟೇಲ್‌ನಲ್ಲಿ ಜರಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕಾಗಿ ಎಲ್ಲ ಸಿದ್ಧತೆಗಳು ನಡೆದಿವೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಸ್ಮತಿ ಇರಾನಿ, ಭಗವಂತ ಖೂಬಾ, ನಿತಿನ್ ಗಡ್ಕರಿ ಸಹಿತ ಹಲವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಮಾವೇಶದಲ್ಲಿ 5000ಕ್ಕೂ ಹೆಚ್ಚು ಗಣ್ಯರು ಭಾಗವಹಿಸುವ ಹಾಗೂ 5 ಲಕ್ಷ ಕೋಟಿ ರೂ. ಹೂಡಿಕೆಯ ನಿರೀಕ್ಷೆ ಇದೆ. ಹೂಡಿಕೆಯಿಂದ ಸುಮಾರು 5 ಲಕ್ಷ ಮಂದಿಗೆ ಉದ್ಯೋಗ ದೊರೆಯಲಿದೆ ಎಂದು ಹೇಳಿದರು.
50 ಸಾವಿರ ಎಕ್ರೆ ಭೂಮಿ ಸ್ವಾಧೀನ:
ಸಮಾವೇಶದ ಸಂದರ್ಭದಲ್ಲಿ ಭೂ ಹಂಚಿಕೆಗೆ ಅನುಕೂಲವಾಗುವಂತೆ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕ್ರೆ ಭೂ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ನೂತನ ಕೈಗಾರಿಕಾ ನೀತಿಯಿಂದಾಗಿ ರಾಜ್ಯ ಉದ್ಯಮ ಸ್ನೇಹಿ ರಾಜ್ಯಗಳ ಪಟ್ಟಿಯಲ್ಲಿ ಅತ್ಯಂತ ಪ್ರಮುಖ ಸ್ಥಾನ ಪಡೆದುಕೊಂಡಿದೆ.2021ರ ಏಪ್ರಿಲ್ 21ರಿಂದ 2022ರ ಮಾರ್ಚ್ ಅವಧಿಯಲ್ಲಿ 1.76 ಲಕ್ಷ ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆ ಆಕರ್ಷಿಸುವಲ್ಲಿ ಸಫಲವಾಗಿದೆ ಎಂದರು.