ಬೆಂಗಳೂರು: ಬಕ್ರೀದ್ ಹಬ್ಬದ ಪ್ರಯುಕ್ತ ನಗರದಲ್ಲಿ ಗೋವು ಹಾಗೂ ಇತರ ಪ್ರಾಣಿಗಳ ಅಕ್ರಮ ಸಾಗಣೆ, ವ್ಯಾಪಾರ ಮತ್ತು ಹತ್ಯೆ ತಡೆಗೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಾನುವಾರುಗಳ ರಕ್ಷಣೆಗೆ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆಕ್ಷೇಪಿಸಿ ನಗರದ ಬೊಮ್ಮನಹಳ್ಳಿ ನಿವಾಸಿ ವಲ್ಲಮಕೊಂಡು ನಾಗಾ ಲಾಲಸಾ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ನ್ಯಾ. ಆಲೋಕ ಆರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಈ ವೇಳೆ ಸರ್ಕಾರದ ಪರ ವಕೀಲ ಬಿ. ಬಾಲಕೃಷ್ಣ ವಾದ ಮಂಡಿಸಿ, ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ನಡೆಯಹುದಾದ ಪ್ರಾಣಿಗಳ ಅಕ್ರಮ ಸಾಗಣೆ, ವ್ಯಾಪಾರ ಮತ್ತು ಹತ್ಯೆಯ ತಡೆಗೆ ಸರ್ಕಾರ ಹಾಗೂ ನಗರ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತರು ಜುಲೈ 30ರಂದು ಸುತ್ತೋಲೆ ಹೊರಡಿಸಿ, ನಗರದ ಎಲ್ಲಾ ವಿಭಾಗಗಳ ಡಿಸಿಪಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿ ಸುತ್ತೋಲೆಯ ಪ್ರತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.
ರಾತ್ರಿ ಗಸ್ತಿನಲ್ಲಿರುವ ಅಧಿಕಾರಿಗಳು, ಡಿಸಿಪಿ ಹಾಗೂ ಎಸಿಪಿಗಳು ತಮ್ಮ ವ್ಯಾಪ್ತಿಗೆ ಬರುವ ಎಲ್ಲಾ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸಮಿತಿ ಸಭೆ ನಡೆಸಿ ಶಾಂತಿ-ಸೌಹಾರ್ದತೆ ಕಾಯ್ದುಕೊಳ್ಳಲು ತಮ್ಮ ತಮ್ಮ ಜವಾಬ್ದಾರಿ ನಿರ್ವಹಿಸುವಂತೆ ಸೂಚಿಸಬೇಕು. ಪ್ರಾರ್ಥನೆ ನಡೆಯುವ ಸ್ಥಳಗಳು, ಮುಸೀದಿಗಳು, ಈದ್ಗಾ ಮೈದಾನ, ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಶಸ್ತ್ರಸಜ್ಜಿತ ಸಿಬ್ಬಂದಿ ನಿಯೋಜಿಸಲು ಪೊಲೀಸ್ ಆಯುಕ್ತರು ತಮ್ಮ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ ಎಂದು ವಿವರಿಸಿದರು.
60 ಜಾನುವಾರುಗಳ ರಕ್ಷಣೆ: ಜುಲೈ 21ರಿಂದ ಈವರೆಗೆ ನಗರದ ದೇವನಹಳ್ಳಿ, ಯಲಹಂಕ ನ್ಯೂ ಟೌನ್, ಜಾಲಹಳ್ಳಿ ಮತ್ತು ಬಾಗಲಗುಂಟೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಾಗುತ್ತಿದ್ದ 60ಕ್ಕೂ ಜಾನುವಾರುಗಳನ್ನು ರಕ್ಷಿಸಲಾಗಿದೆ. ಆರೋಪಿಗಳ ವಿರುದ್ಧ ದೂರು ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠವು ಎರಡು ವಾರದಲ್ಲಿ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.