ಪಣಜಿ: ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಜನರಲ್ ಸೆಕ್ರೆಟರಿ ಪ್ರಿಯಾಂಕಾ ಗಾಂಧಿ ವಾದ್ರಾ ಡಿಸೆಂಬರ್ 10ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಮನೆ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ: 16,50,000 ರೂ. ಮೌಲ್ಯದ ಚಿನ್ನ ವಶಕ್ಕೆ
ಎಎನ್ ಐ ಮೂಲಗಳ ಪ್ರಕಾರ, ಪ್ರಿಯಾಂಕಾ ಗಾಂಧಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ನಂತರ ವಿವಿಧ ಸಂಘಟನೆಗಳ ಜತೆ ಸಂವಾದ ನಡೆಸಲಿದ್ದಾರೆ.
ಅಕ್ವೇಮ್ ನ ಕೋಸ್ಟ್ ಗಾರ್ಡ್ ನಲ್ಲಿ ಮಹಿಳಾ ಸಮಾವೇಶ ಪ್ರಿಯದರ್ಶಿನಿಯನ್ನು ಉದ್ದೇಶಿಸಿ ಪ್ರಿಯಾಂಕಾ ಮಾತನಾಡುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ. ಅಲ್ಲದೇ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಜತೆ ಸಂವಾದ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.
ಪ್ರಿಯಾಂಕಾ ಗಾಂಧಿ ಪ್ರಸ್ತುತ ಉತ್ತರಪ್ರದೇಶದ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿರುವುದಾಗಿ ವರದಿ ವಿವರಿಸಿದೆ. 2022ರಲ್ಲಿ ಉತ್ತರಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದೆ.
ಉತ್ತರಪ್ರದೇಶ ಮತ್ತು ಗೋವಾದಲ್ಲಿ ಕಾಂಗ್ರೆಸ್ ಮತ್ತು ಶಿವಸೇನಾ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದಾಗಿ ಸಂಸದ ಸಂಜಯ್ ರಾವತ್ ಅವರು ಪ್ರಿಯಾಂಕಾ ಗಾಂಧಿ ಜತೆಗಿನ ಮಾತುಕತೆ ಬಳಿಕ ಸುಳಿವು ನೀಡಿದ್ದಾರೆ.